ನವದೆಹಲಿ: ಅಬಕಾರಿ ನೀತಿ ಹಗರಣದ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು (ಶನಿವಾರ) ವಿಡಿಯೊ ಕಾನ್ಫರೆನ್ಸ್ ಮೂಲಕ ರೋಸ್ ಅವೆನ್ಯೂ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಇದೇ ವೇಳೆ ಮಾತನಾಡಿದ ಕೇಜ್ರಿವಾಲ್, ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮತ್ತು ಬಜೆಟ್ ಅಧಿವೇಶನ ನಡೆಯುತ್ತಿರುವುದರಿಂದ ಇಂದು ನ್ಯಾಯಾಲಯಕ್ಕೆ ದೈಹಿಕವಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಮಾರ್ಚ್ 16ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ನ್ಯಾಯಾಲಯವು ಸೂಚನೆ ನೀಡಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಹಗರಣದ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಇತ್ತೀಚೆಗೆ ಆರನೇ ಬಾರಿಗೆ ಸಮನ್ಸ್ ಜಾರಿ ಮಾಡಿತ್ತು.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆದ ಕೇಜ್ರಿವಾಲ್ ಅವರಿಗೆ ಫೆ.19ರಂದು ಕೇಂದ್ರೀಯ ತನಿಖಾ ಸಂಸ್ಥೆಯ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.
ಈ ಪ್ರಕರಣದಲ್ಲಿ ನೀಡಲಾದ ಸಮನ್ಸ್‌ಗಳಿಗೆ ಪ್ರತಿಕ್ರಿಯಿಸದಿರುವುದಕ್ಕೆ ಇ.ಡಿ ದಾಖಲಿಸಿರುವ ದೂರಿನ ಹಿನ್ನೆಲೆಯಲ್ಲಿ ದೆಹಲಿ ಕೋರ್ಟ್ ತನ್ನ ಮುಂದೆ ಫೆ. 17ರಂದು ಹಾಜರಾಗುವಂತೆ ಸೂಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.