ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಎಎಪಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಲ್ಲಿಸಿರುವ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇ.ಡಿಗೆ ನೋಟಿಸ್ ಜಾರಿ ಮಾಡಿದೆ.
2021-22ರಲ್ಲಿ ದೆಹಲಿ ಸರ್ಕಾರವು ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿತ್ತು.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ನಂತರ ಇದೇ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು.
ಕಳೆದ ವರ್ಷ ಮಾರ್ಚ್ 9ರಂದು ಸಿಸೋಡಿಯಾ ಅವರನ್ನು ಇ.ಡಿ ಬಂಧಿಸಿತ್ತು. ಬಳಿಕ ಸಿಬಿಐ ಕೂಡ ಇದೇ ಪ್ರಕರಣದಲ್ಲಿ ಬಂಧಿಸಿತ್ತು. ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.