ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಲಿದೆ.
ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವ ಆಗಸ್ಟ್ 20ರ ವಿಚಾರಣೆಯ ಪಟ್ಟಿಯ ಪ್ರಕಾರ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಹಾಗೂ ಕೆ.ವಿ ವಿಶ್ವನಾಥನ್ ಅವರ ಪೀಠವು ಕವಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.
ತಮಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಕವಿತಾ ಸುಪ್ರೀಂ ಮೆಟ್ಟಿಲೇರಿದರು. ಬಳಿಕ ನ್ಯಾಯಾಲಯವು, ಅವರು ಕೋರಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯಗಳಿಗೆ (ಇ.ಡಿ) ನೋಟಿಸ್ ನೀಡಿತ್ತು.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಅದೇ ರೀತಿ ಎಎಪಿ ನಾಯಕ ಮನೀಷ್ ಸಿಸೋಡಿಯಾ ಅವರಿಗೆ ಜಾಮೀನು ನೀಡಿದೆ. ಈ ತೀರ್ಪುಗಳನ್ನು ಕವಿತಾ ಪರ ವಕೀಲರು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಇ.ಡಿ ಮತ್ತು ಸಿಬಿಐ ಕವಿತಾ ವಿರುದ್ಧ ಪ್ರತ್ಯೇಕ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಾರ್ಚ್ 15ರಂದು ಇ.ಡಿ ಕವಿತಾ ಅವರನ್ನು ಬಂಧಿಸಿತ್ತು. ಇವರು ನ್ಯಾಯಾಂಗ ಬಂಧನದಲ್ಲಿ ಇದ್ದ ಅವಧಿಯಲ್ಲೇ ಏಪ್ರಿಲ್ 11ರಂದು ಸಿಬಿಐ ಬಂಧಿಸಿತು.
ವಿಚಾರಣಾ ನ್ಯಾಯಾಲಯವು ಜಾಮೀನು ನಿರಾಕರಿಸಿದ ಬಳಿಕ ಕವಿತಾ ದೆಹಲಿ ಹೈಕೋರ್ಟ್ ಮೊರೆ ಹೋದರು. ಆದರೆ ‘ತನಿಖೆ ನಿರ್ಣಾಯಕ ಹಂತದಲ್ಲಿರುವುದರಿಂದ ಸದ್ಯಕ್ಕೆ ಜಾಮೀನು ನೀಡಲಾಗುವುದಿಲ್ಲ’ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಜುಲೈ 1ರಂದು ಹೈಕೋರ್ಟ್ ತೀರ್ಪು ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.