ADVERTISEMENT

ಅಬಕಾರಿ ನೀತಿ: ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

ಪಿಟಿಐ
Published 11 ಜುಲೈ 2024, 9:43 IST
Last Updated 11 ಜುಲೈ 2024, 9:43 IST
ಮನಿಶ್‌ ಸಿಸೋಡಿಯಾ 
ಮನಿಶ್‌ ಸಿಸೋಡಿಯಾ    

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಮರು ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ಹಿಂದೆ ಸರಿದಿದ್ದಾರೆ.

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಜಾರಿ ನಿರ್ದೆಶನಾಲಯ(ಇ.ಡಿ) ಮತ್ತು ಕೇಂದ್ರೀಯ ತನಿಖಾ ದಳ(ಸಿಬಿಐ) ದಾಖಲಿಸಿರುವ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದ ಜಾಮೀನು ಅರ್ಜಿಗಳ ಮರು ವಿಚಾರಣೆಯನ್ನು ನ್ಯಾಯಮೂರ್ತಿ ಸಂಜೀವ್ ಕುಮಾರ್ ಅವರು ಒಳಗೊಳ್ಳದ ಪೀಠವು ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಸಂಜಯ್ ಕರೋಲ್ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಹೇಳಿದೆ.

ಜಾಮೀನು ಅರ್ಜಿಯ ವಿಚಾರಣೆ ಆರಂಭವಾಗುತ್ತಿದ್ದಂತೆ, 'ನಮ್ಮ ಸಹೋದರನಿಗೆ ಕೆಲವು ಸಮಸ್ಯೆಗಳಿವೆ. ವೈಯಕ್ತಿಕ ಕಾರಣಗಳಿಂದ ಅವರು ಈ ಕುರಿತಂತೆ ವಿಚಾರಣೆ ನಡೆಸಲು ಸಿದ್ದರಿಲ್ಲ’ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು.

ADVERTISEMENT

ಸಿಸೋಡಿಯಾ ಪರ ಹಾಜರಾಗಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಶೀಘ್ರ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಅಲ್ಲದೆ, ಎರಡೂ ಪ್ರಕರಣಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ ಎಂದು ಹೇಳಿದರು.

ಇದಕ್ಕುತ್ತರಿಸಿದ ಪೀಠವು, ಜುಲೈ 15ರಂದು ಮತ್ತೊಂದು ಪೀಠವು ಪ್ರಕರಣಗಳ ವಿಚಾರಣೆ ನಡೆಸಲಿದೆ ಎMದು ಹೇಳಿತು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇ.ಡಿ ದಾಖಲಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಅರ್ಜಿಯ ವಿಚಾರಣೆಗೆ ಜೂನ್ 4ರಂದು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಮೇ 21ರಂದು ತಮ್ಮ ಜಾಮೀನು ಅರ್ಜಿ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅಬಕಾರಿ ನೀತಿ ಹಗರಣದಲ್ಲಿ ಪಾತ್ರದ ಆರೋಪದ ಹಿನ್ನೆಲೆಯಲ್ಲಿ 2023ರ ಫೆಬ್ರುವರಿ 26ರಂದು ಸಿಬಿಐ, ಸಿಸೋಡಿಯಾ ಅವರನ್ನು ಬಂಧಿಸಿತ್ತು. ಸಿಬಿಐ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಹಣ ಅಕ್ರಮ ಸಾಗಾಟ ಆರೋಪಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್ 9ರಂದು ಇ.ಡಿ ಸಹ ಸಿಸೋಡಿಯಾ ಅವರನ್ನು ಬಂಧನಕ್ಕೊಳಪಡಿಸಿತ್ತು.

2023ರ ಫೆಬ್ರುವರಿ 8ರಂದು ಅವರು ದೆಹಲಿ ಸಂಪುಟ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.