ನವದೆಹಲಿ: ಜಾರಿ ನಿರ್ದೇಶನಾಲಯವು (ಇ.ಡಿ) ತಮಗೆ ನೀಡಿರುವ ಸಮನ್ಸ್ ಪ್ರಶ್ನಿಸಿ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಇ.ಡಿ. ಅಧಿಕಾರಿಗಳಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸೂಚಿಸಿದೆ.
ಇ.ಡಿ. ಅಧಿಕಾರಿಗಳ ದೂರು ಆಧರಿಸಿ ಕೇಜ್ರಿವಾಲ್ ವಿರುದ್ಧ ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ತಡೆ ನೀಡಲು ನ್ಯಾಯಮೂರ್ತಿ ಮನೋಜ್ ಕುಮಾರ್ ಒಹ್ರಿ ನಿರಾಕರಿಸಿದರು. ದೂರನ್ನು ದಾಖಲಿಸಿರುವ ಅಧಿಕಾರಿ ಒಬ್ಬರಾದರೆ, ಸಮನ್ಸ್ ಜಾರಿ ಮಾಡಿರುವ ಅಧಿಕಾರಿ ಬೇರೊಬ್ಬರು. ಹೀಗಾಗಿ ಈ ಸಮನ್ಸ್‌ಗೆ ಮಾನ್ಯತೆ ಇದೆಯೇ ಎಂಬ ಪ್ರಶ್ನೆಯನ್ನು ಕೇಜ್ರಿವಾಲ್ ಪರ ವಕೀಲರು ನ್ಯಾಯಾಲಯದಲ್ಲಿ ಎತ್ತಿದ್ದಾರೆ.
ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ಸೆಪ್ಟೆಂಬರ್ 17ರಂದು ವಜಾಗೊಳಿಸಿದೆ. ಈ ಕ್ರಮವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.