ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಎರಡೂ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಮೇ 28ರಂದು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಮೂರ್ತಿ ಸ್ವರ್ಣ ಕಾಂತ ಶರ್ಮ ಅವರು ತೀರ್ಪನ್ನು ಕಾಯ್ದಿರಿಸಿದ್ದರು.
ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣ ಮತ್ತು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕವಿತಾ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕವಿತಾ ಜಾಮೀನು ಅರ್ಜಿಗೆ ಸಿಬಿಐ ಮತ್ತು ಇ.ಡಿ ಆಕ್ಷೇಪ ವ್ಯಕ್ತಪಡಿಸಿದ್ದವು.
'ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ 50 ಆರೋಪಿಗಳಲ್ಲಿ, ಕವಿತಾ ಒಬ್ಬರೆ ಮಹಿಳೆ. ಹಾಗಾಗಿ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕು’ ಎಂದು ಕವಿತಾ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 15ರಂದು ಇ.ಡಿಯು ಕವಿತಾ ಅವರನ್ನು ಬಂಧಿಸಿತ್ತು. ಬಳಿಕ ಸಿಬಿಐ ಕವಿತಾ ಅವರನ್ನು ತಿಹಾರ್ ಜೈಲಿನಲ್ಲಿ ಬಂಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.