ಮೀರತ್/ ಲಖನೌ (ಉತ್ತರಪ್ರದೇಶ): ಡಿಟರ್ಜೆಂಟ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಸಮೀಪದ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲೋಹಿಯಾ ನಗರದಲ್ಲಿ ದುರಂತ ಸಂಭವಿಸಿದೆ. ಘಟನಾಸ್ಥಳದಲ್ಲಿ ಡಿಟರ್ಜೆಂಟ್ ತಯಾರಿಕೆಗೆ ಬಳಸುವ ಕೆಲವು ಯಂತ್ರಗಳು ಪತ್ತೆಯಾಗಿವೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ.
ಕಟ್ಟಡದಲ್ಲಿ ಪಟಾಕಿ ತಯಾರಿಸಲಾಗುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಡಿಟರ್ಜೆಂಟ್ ತಯಾರಿಸುವ ಗೋದಾಮು ಆಗಿದೆ. ಇಲ್ಲಿ ಪಟಾಕಿ ತಯಾರಿಸುತ್ತಿದ್ದ ಕುರಿತು ಯಾವುದೇ ಮಾಹಿತಿ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಅವರು ಸಂತಾಪ ಸೂಚಿಸಿದ್ದಾರೆ. ‘ಘಟನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯವನ್ನು ವೇಗಗೊಳಿಸಲು ಮತ್ತು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದು ಸಿಎಂ ಕಚೇರಿ ‘ಎಕ್ಸ್’ನಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.