ನವದೆಹಲಿ:ನವದೆಹಲಿ: ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮೃತಪಟ್ಟ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೂರಿದ್ದಾರೆ.
ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು, ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಡಿಸಲಾಗದ್ದು ನಮ್ಮೆಲ್ಲರ ಸೋಲು. ಸಾಮಾಜಿಕವಾಗಿ ನಾವೆಲ್ಲರೂ ತಪ್ಪಿತಸ್ಥರು. ಇದು ಉತ್ತರ ಪ್ರದೇಶದಲ್ಲಿನ ಕಾನೂನು ಸುವ್ಯವಸ್ಥೆಯನ್ನು ತೋರಿಸುತ್ತದೆ ಎಂದಿದ್ದಾರೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಏಕೆ ಹೆಚ್ಚಾಗುತ್ತಿವೆ ಮತ್ತು ಏಕೆ ಸಂತ್ರಸ್ತರಿಗೆ ರಕ್ಷಣೆಯನ್ನು ನೀಡಲಾಗುತ್ತಿಲ್ಲ. ಉನ್ನಾವ್ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಏಕೆ ಸಂತ್ರಸ್ತೆಗೆ ಶೀಘ್ರವೇ ರಕ್ಷಣೆಯನ್ನು ಒದಗಿಸಲಿಲ್ಲ? ಎಫ್‌ಐರ್ ದಾಖಲಿಸಲು ನಿರಾಕರಿಸಿದ ಅಧಿಕಾರಿ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಈ ವಿಚಾರವಾಗಿ ಸರ್ಕಾರವು ಯಾವ ಕ್ರಮ ಕೈಗೊಂಡಿದೆ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ಉತ್ತರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಿಯಾಂಕಾ, ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯು ರಾಯಬರೇಲಿ ನ್ಯಾಯಾಲಯಕ್ಕೆ ಬರುತ್ತಿದ್ದ ವೇಳೆ ಐವರು ದುಷ್ಕರ್ಮಿಗಳು ಗುರುವಾರ ಬೆಳಗ್ಗೆ ಬೆಂಕಿ ಹಚ್ಚಿದ್ದರು. ಶೇಕಡ 90ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ರಾತ್ರಿ 11.10ಕ್ಕೆ ಹೃದಯಾಘಾತವಾಗಿದೆ. ಬಳಿಕ 11.40ಕ್ಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.