ADVERTISEMENT

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ| ಮೆಹಬೂಬಾ ವಿರುದ್ಧ ಎಫ್‌ಐಆರ್‌

ಪಿಟಿಐ
Published 29 ಮೇ 2024, 14:05 IST
Last Updated 29 ಮೇ 2024, 14:05 IST
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ   

ಶ್ರೀನಗರ: ಮತದಾನದ ದಿನ ಪ್ರತಿಭಟನೆ ನಡೆಸಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಸೆಕ್ಷನ್‌ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಮೆಹಬೂಬಾ ಅವರು ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಬಿಜ್‌ಬೆಹೆರಾ ಪ್ರದೇಶದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಧರಣಿ ಕುಳಿತಿದ್ದರು. ಇದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.

‘ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಸೋಜಿಗ ಉಂಟುಮಾಡಿದೆ. ಸತ್ಯ ಹೇಳಿದ್ದಕ್ಕೆ ಮತ್ತು ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಕ್ಕೆ ಪಿಡಿಪಿ ತೆತ್ತ ಬೆಲೆ ಇದು. ಮತದಾನಕ್ಕೆ ಮುನ್ನ ನಮ್ಮ ಪಕ್ಷದ ನೂರಾರು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಕ್ರಮವನ್ನು ಖಂಡಿಸಿ ನಾವು ಪ್ರತಿಭಟನೆ ನಡೆಸಿದ್ದೆವು’ ಎಂದು ಮೆಹಬೂಬಾ ಅವರು ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಅನಂತನಾಗ್– ರಜೌರಿ ಲೋಕಸಭಾ ಕ್ಷೇತ್ರಕ್ಕೆ ಮೇ 25 ರಂದು ಮತದಾನ ನಡೆದಿತ್ತು. ಪಕ್ಷದ ಕಾರ್ಯಕರ್ತರು ಮತ್ತು ಏಜೆಂಟರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡದ್ದನ್ನು ವಿರೋಧಿಸಿ ಅವರು ಅನಂತನಾಗ್‌ ಜಿಲ್ಲೆಯ ಪೊಲೀಸ್‌ ಠಾಣೆ ಮುಂದೆ ಧರಣಿ ಕುಳಿತಿದ್ದರು.

‘ಬಿಜ್‌ಬೆಹೆರಾದಲ್ಲಿ ಪಿಡಿ‍ಪಿಯ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ನೆರೆದು ರಸ್ತೆ ತಡೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಪ್ರತಿಭಟನೆ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.