ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ದಾಳಿ ಪ್ರಾರಂಭವಾಗಿದೆ ಎಂದು ಶನಿವಾರ ಅಧಿಕಾರಿಗಳು ಹೇಳಿದ್ದಾರೆ.
ಕಳೆದ ತಿಂಗಳು ಜಮ್ಮು ಪ್ರದೇಶದ ಭಾಟಾ ಧುರಿಯನ್‌ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ನ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸೇನೆಯ ಕಮಾಂಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜೌರಿ ಸೆಕ್ಟರ್ ಪ್ರದೇಶದ ಕಂಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಯುತ್ತಿದೆ ಎಂದು ರಕ್ಷಣಾ ಸಚಿವಾಲಯ ಸಾರ್ವಜನಿಕ ಸಂಪರ್ಕ ಘಟಕದ (ಪಿಆರ್‌ಒ) ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ಮಾಹಿತಿ ನೀಡಿದ್ದಾರೆ.
ರಾಜೌರಿ ಸೆಕ್ಟರ್ ಪ್ರದೇಶದ ಕಂಡಿ ಅರಣ್ಯದಲ್ಲಿ ಭಯೋತ್ಪಾದಕರು ಇರುವುದರ ಬಗ್ಗೆ ಖಚಿತ ಮಾಹಿತಿ ಪಡೆದು ಜಂಟಿ ಕಾರ್ಯಾಚರಣೆಯನ್ನು ಮೇ 3 ರಂದು ಪ್ರಾರಂಭಿಸಲಾಯಿತು. ಶುಕ್ರವಾರ ಬೆಳಿಗ್ಗೆ ಸೇನಾ ತಂಡವು ಗುಹೆಯಲ್ಲಿ ಅಡಗಿರುವ ಭಯೋತ್ಪಾದಕರನ್ನು ಪತ್ತೆ ಹಚ್ಚಿತು.
ಈ ಕಾರ್ಯಾಚರಣೆಯಲ್ಲಿ ಐವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದು, ಮೇಜರ್ ಒಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗದಂತೆ ಕ್ರಮಕೈಗೊಳ್ಳಲು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಸೇನೆಯ ಹೆಚ್ಚುವರಿ ಪಡೆಗಳನ್ನು ಪ್ರದೇಶಕ್ಕೆ ಕಳುಹಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.