ಚೆನ್ನೈ: ತಮಿಳುನಾಡಿನ ಹೊಸೂರಿನಲ್ಲಿರುವ ಟಾಟಾ ಕಂಪನಿಯ ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕಾ ಘಟಕದ ರಾಸಾಯನಿಕ ಗೋದಾಮಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಒಂಭತ್ತು ಜನರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಹಲವು ಗಂಟೆಗಳ ಪರಿಶ್ರಮದ ನಂತರ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
‘ಘಟಕದ ರಾಸಾಯನಿಕ ಗೋದಾಮಿನಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಗೆ ಈ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳಕ್ಕೆ ಸೇರಿದ ಏಳು ತುಕಡಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಪಾಲ್ಗೊಂಡವು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ’ ಎಂದು ಹೊಸೂರು ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.
‘ಇದೊಂದು ದುರದೃಷ್ಟಕರ ಘಟನೆ ಶನಿವಾರ ನಡೆದಿದೆ. ಘಟಕದಲ್ಲಿ ಕಾರ್ಯನಿರ್ವಹಿಸುವ ನೌಕರರು ಸುರಕ್ಷಿತವಾಗಿದ್ದಾರೆ. ಘಟನೆಗೆ ಕಾರಣವನ್ನು ಪತ್ತೆ ಮಾಡುವ ಕಾರ್ಯದಲ್ಲಿ ಅಧಿಕಾರಿಗಳು ತಲ್ಲಿನರಾಗಿದ್ದಾರೆ. ಸಿಬ್ಬಂದಿ ಸುರಕ್ಷತೆ ಮತ್ತು ಪಾಲುದಾರರ ಹಿತ ಕಾಯುವಲ್ಲಿ ಸಂಸ್ಥೆ ಬದ್ಧವಾಗಿದೆ ಹಾಗೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಟಾಟಾ ಎಲೆಕ್ಟ್ರಾನಿಕ್ಸ್‌ನ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.