ವಿಜಯವಾಡ (ಆಂಧ್ರ ಪ್ರದೇಶ): ನಗರದಲ್ಲಿರುವ ಟಿವಿಎಸ್ ಬೈಕ್ ಶೋ ರೂಂನಲ್ಲಿ ಗುರುವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಅಂದಾಜು ₹ 15 ಕೋಟಿ ನಷ್ಟ ಉಂಟಾಗಿದೆ ಎಂದು ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.
ಚೆನ್ನೈ–ಕೋಲ್ಕತ್ತ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಶೋ ರೂಂ ಇತ್ತು. ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎನ್ನಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ ಶೋ ರೂಂನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಗೋದಾಮಿಗೂ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಶೋ ರೂಂ, ಗೋದಾಮು ಮತ್ತು ಸೇವಾ ಕೇಂದ್ರ (ಸರ್ವಿಸ್ ಸೆಂಟರ್) ಒಂದೇ ಕಡೆ ಇದ್ದದ್ದರಿಂದ ವಿಜಯವಾಡ ಮತ್ತು ಕೃಷ್ಣಾ ಜಿಲ್ಲೆಯಲ್ಲಿ ಇದು ಟಿವಿಎಸ್ ವಾಹನಗಳ ಪ್ರಮುಖ ಕೇಂದ್ರವಾಗಿತ್ತು.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.