ನವದೆಹಲಿ: ದೆಹಲಿ ರೈಲುನಿಲ್ದಾಣದಲ್ಲಿ ನಿಂತಿದ್ದ ಚಂಡೀಗಡ-ಕೊಚುವಳ್ಳಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಪ್ರಯಾಣಿಕರು ಹಾಗೂ ರೈಲ್ವೆ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ 2ಕ್ಕೆಈ ಘಟನೆ ಸಂಭವಿಸಿದೆ. ಈ ಎಕ್ಸ್ ಪ್ರೆಸ್ ರೈಲು ಎಲೆಕ್ಟ್ರಿಕ್ ಎಂಜಿನ್ ಹೊಂದಿರುವ ಈ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ನಂತರ ರೈಲಿನಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ದಿಕ್ಕಾಪಾಲಾಗಿ ಓಡಲಾರಂಭಿಸಿದ್ದಾರೆ. ಒಳಗೆ ಕುಳಿತಿದ್ದ ಪ್ರಯಾಣಿಕರು ನೂಕು ನುಗ್ಗಲಿನಲ್ಲಿ ಒಬ್ಬರ ಮೇಲೊಬ್ಬರು ಬಿದ್ದು ರೈಲಿನ ಬೋಗಿಗಳಿಂದ ಹೊರಗೆ ಬಂದಿದ್ದಾರೆ. ಸ್ಥಳದಲ್ಲಿಯೇ ಇದ್ದ ರೈಲ್ವೆ ಪೊಲೀಸರು, ಅಗ್ನಿಶಾಮಕದಳದ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೂಡಲೆ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.
ಬೆಂಕಿಗೆ ಕಾರಣ ತಿಳಿದುಬಂದಿಲ್ಲ. ರೈಲ್ವೆ ಇಲಾಖೆಯ ತಾಂತ್ರಿಕ ವಿಭಾಗದ ಎಂಜಿನಿಯರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.
ಈ ಘಟನೆಯಿಂದಾಗಿ ರೈಲು ನಿಲ್ದಾಣದಲ್ಲಿ ಕೆಲ ರೈಲುಗಳು ಹೊರಡುವ ಹಾಗೂ ಆಗಮಿಸುವ ಸಮಯದಲ್ಲಿ ವ್ಯತ್ಯಯ ಉಂಟಾಗಿತ್ತು. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ರೈಲ್ವೆ ಸಚಿವರ ಸ್ಪಷ್ಟನೆ
ಕೇಂದ್ರ ರೈಲ್ವೆ ಮಂತ್ರಿ ಪಿಯೂಶ್ ಗೋಯಲ್ ಟ್ವೀಟ್ ಮಾಡಿದ್ದು, ಚಂಡೀಗಡ-ಕೊಚುವಳ್ಳಿಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿಕಾಣಿಸಿಕೊಂಡಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಲ್ಲಿ ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಹಾಜರಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.