ಮುಂಬೈ: ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣ ಸಂಬಂಧ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅವರನ್ನು ಮುಂಬೈ ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಜತೆಗೆ, ಮಹಾರಾಷ್ಟ್ರ ಸಂಘಟಿತ ಅಪರಾಧಗಳ ತಡೆ ಕಾಯ್ದೆ (ಎಂಸಿಒಸಿಎ) ಅಡಿ ಅವರ ವಿರುದ್ಧ ದೂರು ದಾಖಲಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸಲ್ಮಾನ್ ಖಾನ್ ನಿವಾಸದ ಬಳಿ ದಾಳಿ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಮತ್ತು ಅನ್ಮೋಲ್ ಬಿಷ್ಣೋಯ್ ಅವರನ್ನು ಪ್ರಮುಖ ಆರೋಪಿಗಳೆಂದು ಘೋಷಿಸಲಾಗಿದೆ. ಸದ್ಯ ಕೆನಡಾದಲ್ಲಿರುವ ಅನ್ಮೋಲ್, ಅಮೆರಿಕಕ್ಕೆ ಪ್ರಯಾಣಿಸುತ್ತಿದ್ದಾನೆ. ಹಾಗಾಗಿ ಆತನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.
ಪ್ರಕರಣ ಸಂಬಂಧ ಶೂಟರ್‌ಗಳಾದ ಸಾಗರ್ ಪಾಲ್ (21) ಮತ್ತು ವಿಕ್ಕಿ ಗುಪ್ತಾಗೆ ಪಿಸ್ತೂಲ್‌ಗಳು ಮತ್ತು ಗುಂಡುಗಳನ್ನು ಪೂರೈಸಿರುವ ಆರೋಪದ ಮೇರೆಗೆ ಸುಭಾಷ್ ಚಂದರ್ (37) ಮತ್ತು ಅನೂಜ್ ತಪನ್ (32) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.