ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಮತ್ತೊಬ್ಬ ಸದಸ್ಯನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಹರಿಯಾಣದ ಫತೇಹಾಬಾದ್ ನಿವಾಸಿ ಹರ್ಪಾಲ್ ಸಿಂಗ್ (34) ಬಂಧಿತ ಆರೋಪಿ. ಸೋಮವಾರ ಸಂಜೆ ಮುಂಬೈ ಅಪರಾಧ ವಿಭಾಗದ ತಂಡ ಆತನ ಸ್ವಗ್ರಾಮದಿಂದ ಬಂಧಿಸಿ ಮುಂಬೈಗೆ ಕರೆತಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ ಆತನನ್ನು ಮುಂಬೈಗೆ ಕರೆತರಲಾಗಿದ್ದು, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಪಾಲ್ ಸಿಂಗ್ ಸೇರಿ ಈವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.
ಏಪ್ರಿಲ್ 14ರ (ಭಾನುವಾರ) ಮುಂಜಾನೆ 5 ಗಂಟೆ ವೇಳೆಗೆ ಎರಡು ಬೈಕ್‌ಗಳಲ್ಲಿ ಬಂದ ಇಬ್ಬರು ಆರೋಪಿಗಳು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು.
ಪ್ರಕರಣದಲ್ಲಿ ಈ ತಿಂಗಳ ಆರಂಭದಲ್ಲಿ ಬಂಧಿತನಾದ ಬಿಷ್ಣೋಯ್ ಗ್ಯಾಂಗ್ ಸದಸ್ಯ ಮೊಹಮ್ಮದ್ ರಫೀಕ್ ಚೌಧರಿ, ವಿಚಾರಣೆಯ ವೇಳೆ ಹರ್ಪಾಲ್ ಸಿಂಗ್ ಹೆಸರನ್ನು ಬಾಯ್ಬಿಟ್ಟಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಯಲ್ಲಿ ತಮ್ಮ ಕೈವಾಡವಿದೆ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೇಳಿಕೊಂಡಿದ್ದ. ಈ ಬಗ್ಗೆ ಆತ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.