ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಕಾನ್‌ಸ್ಟೆಬಲ್ ಸೋಮವಾರ ರೈಲಿನಲ್ಲಿದ್ದ 4 ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನ್‌ಸ್ಟೆಬಲ್ ತಮ್ಮ ಸ್ವಯಂಚಾಲಿತ ಬಂದೂಕಿನಿಂದ ಗುಂಡು ಹಾರಿಸಿದ್ದು, ಮೃತರಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಮೂವರು ಪ್ರಯಾಣಿಕರು ಸೇರಿದ್ದಾರೆ. ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬೆಳಿಗ್ಗೆ 7:30 ರ ಸುಮಾರಿಗೆ ಪಶ್ಚಿಮ ರೈಲ್ವೆಯ ಮೀರಾ ರೋಡ್ ಮತ್ತು ಭಾಯಂದರ್ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೈಪುರ-ಮುಂಬೈ ರೈಲಿನ ಬಿ5 ಎಸಿ ಕೋಚ್‌ನಲ್ಲಿ ಈ ಘಟನೆ ನಡೆದಿದೆ.
ಗುಂಡು ಹಾರಿಸಿದ ಕಾನ್‌ಸ್ಟೆಬಲ್ ಭಾಯಂದರ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೋರಿವಲಿ ನಿಲ್ದಾಣದಲ್ಲಿ ಎಲ್ಲಾ ನಾಲ್ಕು ಮೃತದೇಹಗಳನ್ನು ರೈಲಿನಿಂದ ಹೊರತೆಗೆಯಲಾಗಿದ್ದು, ಕಾಂದಿವಲಿಯ ಬಾಬಾಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಸಲಾಗಿದೆ.
‘ಬೆಳಿಗ್ಗೆ 6 ಗಂಟೆ ಸುಮಾರಿಗೆ ಕರ್ತವ್ಯದಲ್ಲಿದ್ದ ಆರ್‌ಪಿಎಫ್ ಕಾನ್‌ಸ್ಟೆಬಲ್ ಗುಂಡು ಹಾರಿಸಿದ್ದಾರೆ ಎಂದು ನಮಗೆ ತಿಳಿದುಬಂದಿದೆ. ಗಂಡಿನ ದಾಳಿಯಿಂದ ನಾಲ್ಕು ಜನರು ಮೃತಪಟ್ಟಿದ್ದಾರೆ. ನಮ್ಮ ರೈಲ್ವೆ ಅಧಿಕಾರಿ ಸ್ಥಳಕ್ಕೆ ತಲುಪಿದ್ದಾರೆ. ಮೃತರ ಕುಟುಂಬಗಳನ್ನು ಸಂಪರ್ಕಿಸಲಾಗಿದ್ದು, ಪರಿಹಾರ ನೀಡಲಾಗುವುದು’ಎಂದು ಡಿಆರ್‌ಎಂ ನೀರಜ್ ಕುಮಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.