ADVERTISEMENT

ಪುಲ್ವಾಮಾ ದಾಳಿಗೆ 4 ವರ್ಷ: ಗಣ್ಯರಿಂದ ಹುತಾತ್ಮರಿಗೆ ಗೌರವ ನಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಫೆಬ್ರುವರಿ 2023, 6:51 IST
Last Updated 14 ಫೆಬ್ರುವರಿ 2023, 6:51 IST
2019ರ ಫೆಬ್ರುವರಿ 14ರಂದು ನಡೆದಿದ್ದ ಪುಲ್ವಾಮಾ ದಾಳಿಯ ಸಂಗ್ರಹ ಚಿತ್ರ (ರಾಯಿಟರ್ಸ್ ಚಿತ್ರ)
2019ರ ಫೆಬ್ರುವರಿ 14ರಂದು ನಡೆದಿದ್ದ ಪುಲ್ವಾಮಾ ದಾಳಿಯ ಸಂಗ್ರಹ ಚಿತ್ರ (ರಾಯಿಟರ್ಸ್ ಚಿತ್ರ)   

ನವದೆಹಲಿ: ಜಮ್ಮು–ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಉಗ್ರರು ನಡೆಸಿದ ಭೀಕರ ದಾಳಿಗೆ ಇಂದಿಗೆ (ಫೆ.14) ನಾಲ್ಕು ವರ್ಷವಾಗಿದೆ.

ಈ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದಾದ್ಯಂತ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ, ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ವೀರ ಯೋಧರನ್ನು ನೆನಪಿಸಿಕೊಳ್ಳುತ್ತೇವೆ. ಅವರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯ ಬಲಿಷ್ಠ ಮತ್ತು ಸಮೃದ್ಧ ದೇಶ ಕಟ್ಟಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ADVERTISEMENT

2019ರ ಈ ದಿನ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ. ಯೋಧರ ಧೈರ್ಯ ಮತ್ತು ತ್ಯಾಗಕ್ಕೆ ದೇಶವೇ ನಮಿಸುತ್ತದೆ. ಇಡೀ ದೇಶ ಹುತಾತ್ಮ ಯೊಧರ ಕುಟುಂಬದೊಂದಿಗೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ಧೈರ್ಯಶಾಲಿ ಸೈನಿಕರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ. ಹುತಾತ್ಮ ಯೋಧರ ಶೌರ್ಯ, ತ್ಯಾಗ, ಅದಮ್ಯ ಧೈರ್ಯ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಯಾವಾಗಲೂ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟ್ವೀಟ್‌ ಮಾಡಿದ್ದಾರೆ.

ಪುಲ್ವಾಮಾದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರಿಗೆ ಶ್ರದ್ಧಾಪೂರ್ವಕ ನಮನಗಳು. ದೇಶಕ್ಕಾಗಿ ಮಡಿದ ವೀರ ಯೋಧರನ್ನು ಸ್ಮರಿಸುತ್ತಾ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸದೃಢ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ಫುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಭಾರತದ ಹೆಮ್ಮೆಯ ಸೈನಿಕರ ತ್ಯಾಗ, ಬಲಿದಾನವನ್ನು ಗೌರವ ಪೂರ್ವಕವಾಗಿ ಸ್ಮರಿಸುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ನಮ್ಮ ಕೆಚ್ಚೆದೆಯ ಯೋಧರು ಬಲಿದಾನಗೈದ ದಿನ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶತ ಶತ ನಮನಗಳು ಎಂದು ಜೆಡಿಎಸ್‌ ಪಕ್ಷ ಟ್ವೀಟ್‌ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.