ಚಂಡೀಗಢ: ಮೂತ್ರಪಿಂಡ (ಕಿಡ್ನಿ) ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸಲಾಗುವುದು ಎಂದು ಹರಿಯಾಣದ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಘೋಷಿಸಿದ್ದಾರೆ.
ಸತತ ಎರಡನೇ ಬಾರಿಗೆ ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇಂದು (ಶುಕ್ರವಾರ) ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೂತ್ರಪಿಂಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ಅದಕ್ಕೆ ಸಂಬಂಧಿಸಿದ ಕಡತಕ್ಕೆ ಸಹಿ ಮಾಡಿದ್ದೇನೆ. ಇನ್ನು ಮುಂದೆ ಕಿಡ್ನಿ ಡಯಾಲಿಸಿಸ್‌ಗೆ ಒಳಗಾಗುವ ರೋಗಿಗಳ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ’ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮೂರನೇ ಬಾರಿಗೆ ಬಿಜೆಪಿಗೆ ಜನಾದೇಶ ನೀಡಿದ್ದಕ್ಕಾಗಿ ಮತ್ತು ಪ್ರಧಾನಿ ಮೋದಿಯವರ ನೀತಿಗಳನ್ನು ಬೆಂಬಲಿಸಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಹರಿಯಾಣ ವಿಧಾನಸಭೆಯ 90 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದಿತ್ತು. ಹಿಸಾರ್ ಶಾಸಕಿ ಸಾವಿತ್ರಿ ಜಿಂದಾಲ್ ಸೇರಿದಂತೆ ಮೂವರು ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ಹರಿಯಾಣದಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸೈನಿ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.