ಪಣಜಿ: ಗೋವಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ನೌಕಾಪಡೆಯ ನೆಲೆಯ ಭಾಗವಾಗಿರುವ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆ ಇ–ಮೇಲ್ ಬಂದಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಬಗ್ಗೆ ತಮ್ಮ ಕಚೇರಿಗೆ ಇಂದು ಬೆಳಿಗ್ಗೆ ಇ–ಮೇಲ್ ಸಂದೇಶ ಬಂದಿದೆ ಎಂದು ‘ಪಿಟಿಐ’ಗೆ ವಿಮಾನ ನಿಲ್ದಾಣದ ನಿರ್ದೇಶಕ ಧನಂಜಯ ರಾವ್ ತಿಳಿಸಿದ್ದಾರೆ.
ಇ–ಮೇಲ್ ಸಂದೇಶ ಗಮನಕ್ಕೆ ಬಂದ ಕೂಡಲೇ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಜತೆಗೆ, ಮತ್ತಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಆದರೆ, ವಿಮಾನ ಕಾರ್ಯಾಚರಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ರಾವ್ ಹೇಳಿದ್ದಾರೆ.
ಬೆದರಿಕೆ ಇ–ಮೇಲ್‌ನ ಮೂಲ ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಜತೆಗೆ ದೇಶದ ಇತರ ವಿಮಾನ ನಿಲ್ದಾಣಗಳಿಗೂ ಸಂದೇಶವನ್ನು ರವಾನಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಬಾಂಬ್ ಬೆದರಿಕೆ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ವಿಮಾನದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಗೋವಾ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.