ನವದೆಹಲಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ 10 ಶಾಸಕರ ಪರವಾಗಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಗೋವಾ ಕಾಂಗ್ರೆಸ್ ಘಟಕವು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಪಕ್ಷಾಂತರ ಮಾಡಿದ ಶಾಸಕರ ಅನರ್ಹತೆ ಮನವಿಯನ್ನು ತಿರಸ್ಕರಿಸಿದ್ದ ಬಾಂಬೆ ಹೈಕೋರ್ಟ್‌ನ ತೀರ್ಪು ಪ್ರಜಾಪ್ರಭುತ್ವದ ಮೂಲಭೂತ ಆಶಯಗಳಿಗೆ ವಿರುದ್ಧವಾಗಿದೆ ಎಂದು ಗೋವಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಿರೀಶ್ ಚೋಡಂಕರ್ ಹೇಳಿದ್ಧಾರೆ.
ಉಚ್ಚ ನ್ಯಾಯಾಲಯದ ವ್ಯಾಖ್ಯಾನವು ‘ದೇಶದ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ, ಇದು ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸದೆಯೇ ಸದನದಲ್ಲಿ ಶಾಸಕರನ್ನು ಹೊಂದಲು ಸಾಧ್ಯವಾಗುವ ಪರಿಸ್ಥಿತಿಗೆ ಕಾರಣವಾಗಬಹುದು’ಎಂದು ಚೋಡಂಕರ್ ಹೇಳಿದರು.
ಸಂವಿಧಾನದ ಹತ್ತನೇ ಶೆಡ್ಯೂಲ್ ಅನ್ನು ಶಾಸನದ ಆಶಯ ಮತ್ತು ಉದ್ದೇಶಗಳಿಗೆ ಅನುಗುಣವಾಗಿ ವ್ಯಾಖ್ಯಾನಿಸುವಂತೆ ಸುಪ್ರೀಂ ಕೋರ್ಟ್‌ಗೆ ಚೋಡಂಕರ್ ಮನವಿ ಮಾಡಿದ್ದಾರೆ.
2017ರ ವಿಧಾನಸಭೆ ಚುನಾವಣೆಯಲ್ಲಿ 13 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಎಂಜಿಪಿ ಮತ್ತು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಸರ್ಕಾರವನ್ನು ರಚಿಸಿತ್ತು. 2019 ರಲ್ಲಿ, 15 ಕಾಂಗ್ರೆಸ್ ಶಾಸಕರ ಪೈಕಿ 10 ಮಂದಿ ಮತ್ತು ಮೂರು ಎಂಜಿಪಿ ಶಾಸಕರಲ್ಲಿ ಇಬ್ಬರು ಬಿಜೆಪಿಗೆ ಸೇರಿದ್ದರು.
ಉಭಯ ಪಕ್ಷಗಳ ಮೂರನೇ ಎರಡರಷ್ಟು ಶಾಸಕರು ಪಕ್ಷ ಬದಲಿಸಿದ ಕಾರಣ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹತೆ ಶಿಕ್ಷೆಗೆ ಗುರಿಯಾಗುವುದಿಲ್ಲ ಎಂದು ತೀರ್ಪು ನೀಡಿದ್ದ ಹೈಕೋರ್ಟ್, ಸ್ಪೀಕರ್ ಆದೇಶವನ್ನು ಎತ್ತಿಹಿಡಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.