ನವದೆಹಲಿ: ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕ(ಸಿಬ್ಬಂದಿ)ನನ್ನು ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬ್ಯಾಂಕಾಕ್‌ನಿಂದ ಇಲ್ಲಿಗೆ ಆಗಮಿಸಿದ ಶಶಿ ತರೂರ್ ಅವರ ಆಪ್ತ ಸಹಾಯಕ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು ಅವರ ವಿರುದ್ಧ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿದ್ದಾರೆ.
ಬಂಧಿತ ವ್ಯಕ್ತಿಯಿಂದ ₹ 35.22 ಲಕ್ಷ ಮೌಲ್ಯದ 500 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಹಿಮಾಚಲ ಪ್ರದೇಶದಲ್ಲಿರುವ ಶಶಿ ತರೂರ್ ಅವರು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ನಿವೃತ್ತ ವ್ಯಕ್ತಿಯಾಗಿದ್ದು, ಆಗಾಗ್ಗೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಾರೆ. 72 ವರ್ಷ ವಯಸ್ಸಾದರೂ ಸಹಾನೂಭೂತಿಯಿಂದ ಅವರನ್ನು ಉಳಿಸಿಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.
ನಾನು ಯಾವುದೇ ತಪ್ಪನ್ನು ಕ್ಷಮಿಸುವುದಿಲ್ಲ, ಈ ಘಟನೆ ಬಗ್ಗೆ ತನಿಖೆಗೆ ಅಗತ್ಯವಾದ ಯಾವುದೇ ಕ್ರಮವನ್ನು ತೆಗೆದುಕೊಳ್ಳುವ ಅಧಿಕಾರಿಗಳ ನಡೆಯನ್ನು ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.