ಕೋಲ್ಕತ್ತ: ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ, ಶೀಘ್ರದಲ್ಲೇ ಪತನವಾಗಲಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಟಿಎಂಸಿ ಆಯೋಜಿಸಿರುವ ಹುತಾತ್ಮರ ದಿನದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅಧಿಕಾರಕ್ಕೆ ಬಂದಿರುವವರು ಕೆಲವೇ ದಿನಗಳ ಅತಿಥಿಗಳು. ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ಶೀಘ್ರದಲ್ಲೇ ಪತನವಾಗಲಿದೆ. ಕೋಮುವಾದಿ ಶಕ್ತಿಗಳು ಯಾವುದೇ ಬೆಲೆ ತೆತ್ತಾದರೂ ಅಧಿಕಾರದಲ್ಲಿರಲು ಬಯಸುತ್ತವೆ. ಆದರೆ, ಅಂತಹ ಯೋಜನೆಗಳು ಯಶಸ್ವಿಯಾಗುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.
‘ಕೇಂದ್ರದಲ್ಲಿರುವ ಕೋಮುವಾದಿ ಶಕ್ತಿಗಳು ಸಂಚುಗಳನ್ನು ರೂಪಿಸುವ ಮೂಲಕ ದೇಶವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ. ದೇಶವನ್ನು ಕೋಮುವಾದದ ಮೇಲೆ ವಿಭಜಿಸಲು ಬಯಸುವ ಶಕ್ತಿಗಳು ತಾತ್ಕಾಲಿಕ ಯಶಸ್ಸನ್ನು ಗಳಿಸಿರಬಹುದು. ಆದರೆ, ಅವರು ಅಂತಿಮವಾಗಿ ಸೋಲಿಸಲ್ಪಡುತ್ತಾರೆ’ ಎಂದು ಅಖಿಲೇಶ್ ಹೇಳಿದ್ದಾರೆ.
ರ‍್ಯಾಲಿಯಲ್ಲಿ ಭಾಗವಹಿಸುವ ಮೊದಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೋಲ್ಕತ್ತದ ಕಾಳಿಘಾಟ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದ ಎಸ್‌ಪಿ ನಾಯಕ ಅಖಿಲೇಶ್ ಯಾದವ್ ದೇಶದ ರಾಜಕೀಯ ಸ್ಥಿತಿಗತಿ ಕುರಿತು ಚರ್ಚಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.