ಚಂಡೀಗಢ: ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ವಿನೇಶ್ ಫೋಗಟ್ ಅವರು ಹರಿಯಾಣದ ಜುಲಾನಾ ವಿಧಾನಸಭೆ ಕ್ಷೇತ್ರದಲ್ಲಿ ಚೊಚ್ಚಲ ಗೆಲುವು ಸಾಧಿಸಿದ್ದಾರೆ.
ಫೋಗಟ್ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದಾರೆ. ಫೋಗಟ್ ಅವರು 65,080 ಮತಗಳನ್ನು ಪಡೆದಿದ್ದರೆ, ಬಿಜೆಯ ಯೋಗೇಶ್ ಕುಮಾರ್ 59,065 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿನೇಶ್ ಫೋಗಟ್, ‘ಇದು ಹೋರಾಟ ಮತ್ತು ಸತ್ಯಕ್ಕೆ ಸಂದ ಜಯ. ಜನರ ಪ್ರೀತಿ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ’ ಎಂದು ಹೇಳಿದರು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆ.ಜಿ ವಿಭಾಗದ ಕುಸ್ತಿಯಲ್ಲಿ ಫೈನಲ್ ತಲುಪಿದ್ದ ಫೋಗಟ್ ಅವರು 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆ ಎಂಬ ಕಾರಣಕ್ಕೆ ಅನರ್ಹಗೊಂಡಿದ್ದರು. ನಂತರ ರಾಜಕೀಯದತ್ತ ಮುಖ ಮಾಡಿದ್ದ ಅವರು, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕೆಲ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆಗ, ಸಿಂಗ್ ವಿರುದ್ಧ ನಡೆದಿದ್ದ ಪ್ರತಿಭಟನೆಗಳಲ್ಲಿ ಫೋಗಟ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.