ನವದೆಹಲಿ: ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಸಂಜೀವ್‌ಕುಮಾರ್ ತಿವಾರಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) 2022ರ ನವೆಂಬರ್ 11ರಂದು ವಿಚಾರಣೆಗೆ ಒಳಪಡಿಸಿದ್ದ ಹೈಕೋರ್ಟ್ ನ್ಯಾಯಪೀಠವು ಅರ್ಜಿದಾರರ ಮನವಿ ತಿರಸ್ಕರಿಸಿತ್ತು. ಜೊತೆಗೆ ₹1 ಲಕ್ಷ ಮೊತ್ತದ ದಂಡವನ್ನೂ ವಿಧಿಸಿತ್ತು. ಈ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಸಚ್‌ದೇವ ಮತ್ತು ವಿಕಾಸ್ ಮಹಾಜನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ‘ಮೇಲ್ಮನವಿ ಅರ್ಜಿಯನ್ನು ಮಾನ್ಯ ಮಾಡಲು ಆಗುವುದಿಲ್ಲ’ ಎಂದು ಹೇಳಿತು.
‘ಮರುಪರಿಶೀಲನಾ ಅರ್ಜಿಯ ಹಿಂದೆ ಮರು ವಿಚಾರಣೆಯ ಹಿತಾಸಕ್ತಿ ಇರುವಂತಿದೆ. ಇದನ್ನು ಅನುಮತಿಸಲಾಗುವುದಿಲ್ಲ’ ಎಂದು ನ್ಯಾಯಪೀಠ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.