ನವದೆಹಲಿ: ಉಗ್ರರಿಗೆ ಹಣಕಾಸಿನ ನೆರವು ನೀಡಿದ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸೀನ್ ಮಲಿಕ್‌ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೋರಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಅಮಿತ್ ಶರ್ಮಾ ಅವರು ಗುರುವಾರ ಹಿಂದೆ ಸರಿದಿದ್ದಾರೆ.
ನ್ಯಾಯಮೂರ್ತಿ ಪ್ರತಿಭಾ ಸಿಂಗ್ ನೇತೃತ್ವದ ವಿಭಾಗೀಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿತ್ತು. ಅಮಿತ್ ಶರ್ಮಾ ಹಿಂದೆ ಸರಿದ ಕಾರಣ ಮತ್ತೊಂದು ಪೀಠ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
‘ನ್ಯಾಯಮೂರ್ತಿ ಶರ್ಮಾ ಅವರು ಸದಸ್ಯರಲ್ಲದ ಇನ್ನೊಂದು ಪೀಠವು ಆ.9ರಂದು ಅರ್ಜಿಯ ವಿಚಾರಣೆ ನಡೆಸಲಿದೆ’ ಎಂದು ನ್ಯಾಯಮೂರ್ತಿಗಳಾದ ಪ್ರತಿಭಾ ಸಿಂಗ್ ತಿಳಿಸಿದರು.
ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥ ಯಾಸೀನ್ ಮಲಿಕ್ ಇಲ್ಲಿನ ತಿಹಾರ್ ಜೈಲಿನಿಂದ ವರ್ಚುವಲ್ ಆಗಿ ವಿಚಾರಣೆಗೆ ಹಾಜರಾದರು. ಮುಂದಿನ ವಿಚಾರಣೆಗೂ ಅವರು ವರ್ಚುವಲ್ ಆಗಿ ಹಾಜರಾಗುವರು ಎಂದು ಹೈಕೋರ್ಟ್ ಹೇಳಿತು.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ಅಪರಾಧ ಸಾಬೀತಾದ ಕಾರಣ ವಿಚಾರಣಾ ನ್ಯಾಯಾಲಯವು 2022ರ ಮಾರ್ಚ್ 24 ರಂದು ಯಾಸೀನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.