ಅಹಮದಾಬಾದ್: ರಾಜ್‌ಕೋಟ್‌ನ ಗೇಮಿಂಗ್ ಜೋನ್ ಅಗ್ನಿ ಅವಘಡ, ಮೊರ್ಬಿ ಸೇತುವೆ ದುರಂತ ಮತ್ತು ಹರ್ನಿ ಸರೋವರದಲ್ಲಿ ನಡೆದಿದ್ದ ದೋಣಿ ಅವಘಡಗಳನ್ನು ಗಮನಕ್ಕೆ ತೆಗೆದುಕೊಂಡಿರುವ ಗುಜರಾತ್ ಹೈಕೋರ್ಟ್, ಎಲ್ಲ ಪೌರ ಸಂಸ್ಥೆಗಳ ಆಯುಕ್ತರ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಅಧಿಕಾರಿಗಳು ತಮ್ಮ ಕೆಲಸದಿಂದ ವಿಮುಖರಾಗಿರುವಂತೆ ತೋರುತ್ತಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಪ್ರಣವ್ ತ್ರಿವೇದಿ ಅವರಿದ್ದ ವಿಭಾಗೀಯ ಪೀಠವು, ‘ಪೌರ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಕರ್ತವ್ಯದಿಂದ ವಿಮುಖರಾಗಿರುವುದರಿಂದ ಹೆಚ್ಚು ಜನ ಸೇರುವ ಸಾರ್ವಜನಿಕ ಸ್ಥಳಗಳು ಮತ್ತು ಮನರಂಜನಾ ಚಟುವಟಿಕೆಗಳು ನಡೆಯುವ ಸ್ಥಳಗಳು ಜನರ ಪ್ರಾಣಕ್ಕೆ ಅಪಾಯಕಾರಿಯಾಗಿ ಪರಿಣಮಿಸಿವೆ’ ಎಂದು ಹೇಳಿದೆ.
ಭವಿಷ್ಯದಲ್ಲಿ ಇಂಥ ಅವಘಡಗಳು ನಡೆಯದಂತೆ ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚಿಸಿರುವ ಹೈಕೋರ್ಟ್, ಈ ಬಗ್ಗೆ ತನಿಖೆ ನಡೆಸಿ, ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.