ಚೆನ್ನೈ: ಮಿಚಾಂಗ್ ಚಂಡಮಾರುತದ ಆರ್ಭಟಕ್ಕೆ ತತ್ತರಿಸಿದ್ದ ತಮಿಳುನಾಡಿನಲ್ಲಿ ಭಾನುವಾರ ತಡರಾತ್ರಿ ಮತ್ತೆ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ತೆಂಕಾಸಿ ಜಿಲ್ಲೆಗಳ ಎಲ್ಲಾ ಶಾಲೆಗಳು, ಕಾಲೇಜುಗಳು, ಖಾಸಗಿ ಸಂಸ್ಥೆಗಳು, ಬ್ಯಾಂಕುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.
ನದಿ ನೀರು ಉಕ್ಕಿ ಹರಿದ ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಮರಳಿನ ಚೀಲ ಮತ್ತು ಜೆಸಿಬಿ ಯಂತ್ರಗಳ ಮೂಲಕ ನೀರಿನ ಹರಿವನ್ನು ನಿಯಂತ್ರಿಸಲಾಗುತ್ತಿದೆ.
‘ಮುನ್ನೆಚ್ಚರಿಕೆ ಕ್ರಮವಾಗಿ 250 ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ನೆರೆ ಪೀಡಿತ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ. ತಿರುನಲ್ವೇಲಿ ಜಿಲ್ಲೆಯಲ್ಲಿ 19, ಕನ್ಯಾಕುಮಾರಿಯಲ್ಲಿ 4 , ತೂತುಕುಡಿಯಲ್ಲಿ 2 ಮತ್ತು ತೆಂಕಾಸಿಯಲ್ಲಿ 1 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸ್ಟಾಲಿನ್ ಸೂಚಿಸಿದ್ದಾರೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.