ಡೆಹ್ರಾಡೂನ್: ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿದಂತೆ ಏಳು ಮಂದಿ ಯಾತ್ರಿಕರು ಇದ್ದರು. ಇದ್ದಕ್ಕಿದ್ದ ಹಾಗೆ ತಾಂತ್ರಿಕ ಅಡಚಣೆ ಉಂಟಾದ ಪರಿಣಾಮ ಕೇದಾರನಾಥದ ಹೆಲಿಪ್ಯಾಡ್‌ನಿಂದ ಕೆಲವು ಮೀಟರ್‌ಗಳ ದೂರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಇಂದು (ಶುಕ್ರವಾರ) ಮುಂಜಾನೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಹೆಲಿಕಾಪ್ಟರ್ ಸಿರ್ಸಿ ಹೆಲಿಪ್ಯಾಡ್‌ನಿಂದ ಕೇದಾರನಾಥಕ್ಕೆ ಟೇಕಾಫ್ ಆಗಿತ್ತು. ಮಾರ್ಗ ಮಧ್ಯದಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು, ಪೈಲಟ್ ತೆಗೆದುಕೊಂಡ ತ್ವರಿತ ನಿರ್ಧಾರದಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಯಾತ್ರಾರ್ಥಿಗಳು ದೇವರ ದರ್ಶನ ಪಡೆದ ನಂತರ ಹಿಂತಿರುಗಲಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಗಹರ್ವಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.