ADVERTISEMENT

ಸೊರೇನ್ ಮಧ್ಯಂತರ ಜಾಮೀನು ಅರ್ಜಿ: ಮೇ 22ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮೇ 2024, 9:24 IST
Last Updated 21 ಮೇ 2024, 9:24 IST
   

ನವದೆಹಲಿ: ಜಾರ್ಖಂಡ್‌‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಂದೂಡಿದೆ.

ಒಂದು ಗಂಟೆ ಕಾಲ ಪ್ರಕರಣವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠ ವಿಚಾರಣೆಯನ್ನು ಮೇ 22ಕ್ಕೆ ಮುಂದೂಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಪ್ರಕರಣವನ್ನು ಉಲ್ಲೇಖಿಸಿ ಸೊರೇನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯವನ್ನು ಕೋರಿದರು.

ADVERTISEMENT

ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಜಾರಿ ನಿರ್ದೇಶನಾಲಯ ಪರ ವಕೀಲರು, ಪ್ರಚಾರ ಮಾಡುವುದು ಮೂಲಭೂತ ಹಕ್ಕಲ್ಲ ಎಂದು ವಾದಿಸಿದರು.

ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೊರೇನ್‌ ಅವರನ್ನು ಜನವರಿ 31ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿ ಹೇಮಂತ್ ಸೊರೇನ್ ಅರ್ಜಿ ಸಲ್ಲಿಸಿದ್ದರು. ಅರ್ಜಿಗೆ ಸಂಬಂಧಿಸಿ ಮೇ 20ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯಕ್ಕೆ ಶುಕ್ರವಾರ ನಿರ್ದೇಶಿಸಿತ್ತು.

ಈ ಸಂಬಂಧ ಸಂಕ್ಷಿಪ್ತ ವಿವರಣೆ ನೀಡಬೇಕು ಎಂದು ಸೂಚಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರಿದ್ದ ಪೀಠವು, ಅರ್ಜಿಯ ವಿಚಾರಣೆಯನ್ನು ಮೇ 21ಕ್ಕೆ ನಿಗದಿಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.