ನವದೆಹಲಿ: ಸಂಸತ್ ಭವನದ ಭದ್ರತೆಗೆ ಸಂಬಂಧಿಸಿದಂತೆ ಬಹು ಆಯಾಮದಲ್ಲಿ ಪರಿಶೀಲನೆ ನಡೆಸುವ ಉದ್ದೇಶದಿಂದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ.
ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ (ಡಿ. 13) ಭಾರಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಯಿತು. ಭದ್ರತಾ ವೈಫಲ್ಯ ಕುರಿತು ಸಮೀಕ್ಷೆ ನಡೆಸಿ, ಅದು ಪುನರಾವರ್ತಿಸದಂತೆ ಕ್ರಿಯಾಯೋಜನೆ ಸಿದ್ಧಪಡಿಸುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಬಿರ್ಲಾ ಹೇಳಿದ್ದಾರೆ.
ಈ ಕುರಿತಂತೆ ಸಂಸದರಿಗೆ ಸ್ಪೀಕರ್ ಪತ್ರ ಬರೆದಿದ್ದಾರೆ. ಕೇಂದ್ರ ಗೃಹ ಇಲಾಖೆ ಸ್ಥಾಪಿಸಲಿರುವ ತನಿಖಾ ಸಮಿತಿಯು ನೀಡುವ ವರದಿಯನ್ನು ಕೂಡಲೇ ಸದನಕ್ಕೂ ಸಲ್ಲಿಸಲಾಗುವುದು. ಈ ತನಿಖಾ ಸಮಿತಿಯ ಜತೆಗೆ, ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದ್ದೇನೆ. ಸಂಸತ್ ಭವನದಲ್ಲಿ ಇಂಥ ಕಹಿ ಘಟನೆಗಳು ಮುಂದೆ ಸಂಭವಿಸದಂತೆ ಎಚ್ಚರವಹಿಸಲು ಅಗತ್ಯವಿರುವ ಕ್ರಿಯಾ ಯೋಜನೆಯನ್ನು ಇದು ಸಿದ್ಧಪಡಿಸಲಿದೆ’ ಎಂದು ಬಿರ್ಲಾ ತಿಳಿಸಿದ್ದಾರೆ.
ಬುಧವಾರ (ಡಿ.13) ಕಲಾಪ ನಡೆಯುತ್ತಿರುವಾಗಲೇ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ ‘ಸ್ಮೋಕ್ ಕ್ಯಾನ್’ (ಹಳದಿ ಬಣ್ಣದ ಹೊಗೆ ಉಗುಳುವ ಕ್ಯಾನ್) ಹಾರಿಸಿ ದಾಂದಲೆ ಎಬ್ಬಿಸಿದ್ದರು. ಇದರಿಂದಾಗಿ, ಸದನದಲ್ಲಿ ಆತಂಕ ಸೃಷ್ಟಿಯಾಗಿತ್ತು.
ಘಟನೆಯ ಮಾಸ್ಟರ್ ಮೈಂಡ್ ಎಂದು ಹೇಳಲಾದ ಲಲಿತ್ ಝಾ ಸೇರಿದಂತೆ ಮೈಸೂರಿನ ವಿಜಯನಗರ ನಿವಾಸಿಯಾಗಿರುವ ಎಂಜಿನಿಯರಿಂಗ್ ಪದವೀಧರ ಮನೋರಂಜನ್ ಡಿ. ಹಾಗೂ ಲಖನೌದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್‌ನ ನೀಲಂ (42) ಮತ್ತು ಮಹಾರಾಷ್ಟ್ರದ ಲಾತೂರ್‌ನ ಅಮೋಲ್ ಶಿಂದೆ (25), ಮಹೇಶ್ ಕುಮಾವತ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಒಳಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.