ಶಿಮ್ಲಾ: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ–ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ –ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ.
ಭಾನುವಾರ ಮಳೆ ಸಂಬಂಧಿತ ಘಟನೆಯಲ್ಲಿ ಐಎಸ್‌ಬಿಟಿ ಬಳಿ ಮರವೊಂದು ಉರುಳಿ ಬಿದ್ದು ಖಾಸಗಿ ಬಸ್ ಜಖಂಗೊಂಡಿದ್ದು, ಕಂಡಕ್ಟರ್ ಗಾಯಗೊಂಡಿದ್ದಾರೆ. ಮಂಡಿ ಜಿಲ್ಲೆಯೊಂದರಲ್ಲೇ 236, ಶಿಮ್ಲಾದಲ್ಲಿ 59 ಮತ್ತು ಬಿಲಾಸ್‌ಪುರ ಜಿಲ್ಲೆಯಲ್ಲಿ 40 ಸೇರಿದಂತೆ ಒಟ್ಟು 621 ರಸ್ತೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿರುವುದರಿಂದ ಶಿಮ್ಲಾ ಮತ್ತು ಸೋಲನ್ ಜಿಲ್ಲೆಗಳಿಗೆ ಅಗತ್ಯ ಸರಕುಗಳ ರವಾನೆಗೆ ತೊಡಕುಂಟಾಗಿದೆ. ಸೇಬು ಮತ್ತಿತರ ಹಣ್ಣುಗಳಿರುವ ನೂರಾರು ಟ್ರಕ್‌ಗಳು ಮತ್ತು ಬಸ್‌ಗಳು ರಸ್ತೆಯ ಎರಡೂ ಬದಿಯಲ್ಲಿ ನಿಂತಿದ್ದು, ವಾಹನ ದಟ್ಟಣೆ ಉಂಟಾಗಿದೆ. ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.