ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಮಂಗಳವಾರ) ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರನ್ನು ಭೇಟಿಯಾದ ಅಮಿತ್ ಶಾ, ಭಾರತ ರತ್ನ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಪಸ್ಥಿತರಿದ್ದರು ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ರಥಯಾತ್ರೆ ನಡೆಸಿ, ಬಿಜೆಪಿ ‘ಹೆಮ್ಮರ’ವಾಗಿ ಬೆಳೆಯಲು ಕಾರಣರಾದ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡಲು ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಧರಿಸಿತ್ತು.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಫೆ.3ರಂದು (ಶನಿವಾರ) ಈ ನಿರ್ಧಾರವನ್ನು ಪ್ರಕಟಿಸಿದ್ದ ಪ್ರಧಾನಿ ನರೇಂದ್ರ ಮೋದಿ, ‘ಅಡ್ವಾಣಿ ಅವರು ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿ. ದೇಶದ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಬಹುಕಾಲ ನೆನಪಿನಲ್ಲಿ ಇರುವಂತಹುದು’ ಎಂದು ಹೇಳಿದ್ದರು.
ಅಯೋಧ್ಯೆಯಲ್ಲಿ ರಾಮಮಂದಿರ ಸಾಕಾರಗೊಂಡು ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದ 11 ದಿನಗಳಲ್ಲೇ ಈ ಹೋರಾಟದ ಪ್ರಮುಖ ನೇತಾರ ಅಡ್ವಾಣಿ ಅವರಿಗೆ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ‘ಮಂಡಲ್’ ರಾಜಕಾರಣದ ಮೂಲಕ ಛಾಪು ಮೂಡಿಸಿರುವ ಠಾಕೂರ್ ಹಾಗೂ ‘ಕಮಂಡಲ’ ರಾಜಕಾರಣದ ನೇತಾರ ಅಡ್ವಾಣಿ ಅವರಿಗೆ ಲೋಕಸಭೆ ಚುನಾವಣೆ ಹತ್ತಿರವಾಗಿರುವಾಗಲೇ ‘ಭಾರತರತ್ನ’ ಪ್ರಶಸ್ತಿ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.