ಶ್ರೀನಗರ: ಅದಾನಿ ಗ್ರೂಪ್ ವಿರುದ್ಧದ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ, ವಿಚಾರಣೆ ನಡೆಸಬೇಕು ಎಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ನನಗೆ ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ಆದಾಗ್ಯೂ ಹಿಂದೆ ಕೂಡ ಅದಾನಿ ಗ್ರೂಪ್ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಕೇಂದ್ರ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಪೂರ್ಣವಾಗಿ ವಿಚಾರಣೆ ನಡೆಸುತ್ತದೆ ಎಂಬ ವಿಶ್ವಾಸವನ್ನು ಹೊಂದಿದ್ದೇನೆ ಎಂದು ಅವರು ಮಾಧ್ಯಮದವರಿಗೆ ತಿಳಿಸಿದರು.
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.
ಭಾರತದಲ್ಲಿ ಬೃಹತ್ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗಾಗಿ ಮುಂದಿನ 20 ವರ್ಷಗಳಲ್ಲಿ 2 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಆಕರ್ಷಿಸಲು ಭಾರತದ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದ ಹಾಗೂ ಅಮೆರಿಕ ಒಳಗೊಂಡಂತೆ ವಿದೇಶಿ ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ ಆರೋಪವು ಇವರ ಮೇಲಿದೆ.
ಆದರೆ, ಅದಾನಿ ಗ್ರೂಪ್ ಈ ಆರೋಪವನ್ನು ತಳ್ಳಿಹಾಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.