ಭೋಪಾಲ್: ಮಧ್ಯಪ್ರದೇಶ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇದರಿಂದಾಗಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂಬ ಕಾಂಗ್ರೆಸ್ಸಿಗರು ನಿರೀಕ್ಷೆ ಹುಸಿಯಾಗಿದೆ.
230 ಸದಸ್ಯರ ಬಲಾಬಲದ ಮಧ್ಯಪ್ರದೇಶ ವಿಧಾನಸಭೆಗೆ ನ.17ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. ಭಾನುವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ 163 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ. ಇತ್ತ ಕಾಂಗ್ರೆಸ್ 63 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್‌ನಾಥ್, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶಕ್ಕೆ ತಲೆಬಾಗುತ್ತೇವೆ. ಅದೇ ರೀತಿ ಬಹುಮತ ಪಡೆದಿರುವ ಬಿಜೆಪಿ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲಿದೆ ಎಂದು ಭಾವಿಸುತ್ತೇವೆ’ ಎಂದು ತಿಳಿಸಿದ್ದಾರೆ.
ನಾವು ವಿರೋಧ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ. ಇಂದು ನಮ್ಮ ಮುಂದಿರುವ ದೊಡ್ಡ ಸವಾಲು ಯುವಕರ ಭವಿಷ್ಯ, ನಿರುದ್ಯೋಗ ಮತ್ತು ರೈತರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದ ಆರ್ಥಿಕತೆ ಮತ್ತು ಕೃಷಿ ಕ್ಷೇತ್ರದ ಆದ್ಯತೆಗಳ ಧ್ವನಿ ಎತ್ತುವುದಾಗಿ ತಿಳಿಸಿದ್ದಾರೆ.
ಚುನಾವಣೆಯಲ್ಲಾದ ಲೋಪದೋಷಗಳನ್ನು ವಿಶ್ಲೇಷಿಸುತ್ತೇವೆ. ಜತೆಗೆ, ನಮ್ಮ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವು ವಿಫಲರಾಗದ್ದೇವೆ. ಎಲ್ಲರೊಂದಿಗೆ ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.
ಬಹುಮತ ಪಡೆದ ಭಾರತೀಯ ಜನತಾ ಪಕ್ಷವನ್ನು ಅಭಿನಂದಿಸುತ್ತೇನೆ. ಬಿಜೆಪಿಯವರು ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲಿದ್ದಾರೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆದರೆ, ಪಕ್ಷದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಂಡಾಯವೆದ್ದು, ತಮ್ಮ ಆಪ್ತ ಶಾಸಕರೊಂದಿಗೆ ಬಿಜೆಪಿಗೆ ಸೇಪರ್ಡೆಯಾದರು. ಇದರಿಂದಾಗಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತ್ತು.
19 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಆಡಳಿತ ವಿರೋಧಿ ಅಲೆ ಹಾಗೂ ಗ್ಯಾರಂಟಿಗಳ ಘೋಷಣೆಯು ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡಲಿದೆ ಎಂದು ಆ ಪಕ್ಷದ ನಾಯಕರು ಭಾವಿಸಿದ್ದರು. ಆದರೆ, ಕಾಂಗ್ರೆಸ್ಸಿಗರ ಕನಸು ಈಡೇರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.