ಶಿಮ್ಲಾ: ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಗುರುವಾರ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 45ಕ್ಕೂ ಹೆಚ್ಚು ಜನರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಕುಲ್ಲುವಿನ ನಿರ್ಮಂದ್, ಸೈಂಜ್ ಮತ್ತು ಮಲಾನಾ ಪ್ರದೇಶಗಳಲ್ಲಿ, ಮಂಡಿಯ ಪಾಧಾರ್ ಮತ್ತು ಶಿಮ್ಲಾ ಜಿಲ್ಲೆಯ ರಾಂಪುರದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.
ಮಂಡಿಯ ರಾಜ್‌ಬಾನ್ ಗ್ರಾಮದಲ್ಲಿ 5 ಮೃತದೇಹಗಳು ಪತ್ತೆಯಾಗಿದ್ದರೆ, ಕುಲ್ಲುವಿನ ನಿರ್ಮಂದ್‌ನಲ್ಲಿ ಒಂದು ಹಾಗೂ ಶಿಮ್ಲಾದ ರಾಂಪುರದಲ್ಲಿ 2 ಮೃತ ದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆಯ ಸಿಬ್ಬಂದಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್, ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಗೃಹ ರಕ್ಷಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಶಿಕ್ಷಣ ಸಚಿವ ರೋಹಿತ್ ಠಾಕೂರ್ ಅವರೊಂದಿಗೆ ಶಿಮ್ಲಾ ಮತ್ತು ಕುಲ್ಲು ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದ್ದಾರೆ.
ದೆಹಲಿಯಲ್ಲಿ ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರನೌತ್, ಮೇಘಸ್ಫೋಟ ಘಟನೆಗಳಲ್ಲಿ ಉಂಟಾದ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮತ್ತು ಗೃಹ ಸಚಿವರು ರಾಜ್ಯಕ್ಕೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ನಾನು ರಾಜ್ಯಕ್ಕೆ ಭೇಟಿ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.