ತಿರುವನಂತಪುರ: ಮುಂದಿನ 5 ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆ ಹಾಗೂ ಜೋರಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇಂದು (ಶನಿವಾರ) ನಾಲ್ಕು ಜಿಲ್ಲೆಗಳಲ್ಲಿ (ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.
ಕೊಟ್ಟಾಯಂ,ಇಡುಕ್ಕಿ, ಕೋಯಿಕ್ಕೋಡ್ ಮತ್ತು ಪತ್ತನಂತಿಟ್ಟನಲ್ಲಿ ಭಾನುವಾರ ಎರ್ನಾಕುಲಂ ಜಿಲ್ಲೆಯಲ್ಲಿ ಸೋಮವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.
ಮುಂದಿನ ದಿನಗಳಲ್ಲಿ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಹಾಗೂ ಗಂಟೆಗೆ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ರಾಜ್ಯದ ಹಲವು ಪ್ರದೇಶಗಳಲ್ಲಿ ನಿರಂತರ ಮಳೆಯಾಗಿದ್ದು, ಮಣಿಮಾಲಾ, ಪಂಬಾ ಸೇರಿದಂತೆ ವಿವಿಧ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಕೊಟ್ಟಾಯಂ ಜಿಲ್ಲೆಯ ಮಣಿಮಾಲಾ ನದಿಯ ನೀರಿನ ಮಟ್ಟ ಅಪಾಯಕಾರಿ ಮಟ್ಟ ತಲುಪಿದ ಹಿನ್ನೆಲೆಯಲ್ಲಿ ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಆರೆಂಜ್ ಅಲರ್ಟ್ ಘೋಷಿಸಿದೆ. ನದಿ ದಡದಲ್ಲಿ ಹಾಗೂ ಕರಾವಳಿ ತೀರದಲ್ಲಿ ವಾಸಿಸುವ ಜನರು ಜಾಗರೂಕರಾಗಿರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.