ಲೋಕಸಭೆ ಅಧಿವೇಶನ ಅಂತ್ಯ, ಕಳಪೆ ಕಾಮಗಾರಿ ಮಾಡಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಸೇರಿ ಈ ದಿನ ಪ್ರಮುಖ 10 ಸುದ್ದಿಗಳು ಇಲ್ಲಿವೆ
ನವದೆಹಲಿ: ಲೋಕಸಭೆ ಮುಂಗಾರು ಅಧಿವೇಶನ ಶುಕ್ರವಾರ ಮುಕ್ತಾಯಗೊಂಡಿದ್ದು, ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಈ ಅವಧಿಯಲ್ಲಿ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಭಾರಿ ಗದ್ದಲಕ್ಕೆ ಸಾಕ್ಷಿಯಾಯಿತು.
ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿಯಿಂದ ವಿಸ್ತೃತ ಹೇಳಿಕೆ ಬಯಸಿದ್ದ ವಿರೋಧ ಪಕ್ಷಗಳು, ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದವು.
ಬೆಳಗಾವಿ: 'ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಆಗಿರುವ ಕಾಮಗಾರಿಗಳ ಕುರಿತು ತನಿಖೆ ನಡೆಸುತ್ತೇವೆ. ಒಳ್ಳೆಯ ಕೆಲಸ ಮಾಡಿದವರಿಗೆ ನಾವು ತೊಂದರೆ ಕೊಡುವುದಿಲ್ಲ. ಆದರೆ, ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕ್ರಮ ಕೈಗೊಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
'ಆಗಸ್ಟ್ 31ರೊಳಗೆ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸಬೇಕು' ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒತ್ತಾಯಿಸಿದ ಕುರಿತು, ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು
ಬೆಂಗಳೂರು: ಬಿಬಿಎಂಪಿಯಲ್ಲಿ 2019ರಿಂದ ನಡೆದಿರುವ ಕಾಮಗಾರಿಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದನ್ನು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ವಿರೋಧಿಸಿದ್ದಾರೆ.
ನಾಲ್ಕು ವರ್ಷಗಳ ಹಿಂದಿನ ಕಾಮಗಾರಿಯನ್ನು ಈಗ ಹೇಗೆ ತನಿಖೆ ಮಾಡಲಾಗುತ್ತದೆ. ಇದು ಸರಿಯಲ್ಲ. ಬಾಕಿ ಬಿಲ್ ಮೊತ್ತವನ್ನು ಆಗಸ್ಟ್ 31 ರೊಳಗೆ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ಹೋರಾಟ ನಿರ್ಧರಿಸಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.
ನವದೆಹಲಿ: ಮುಂಬರುವ ಲೋಕಸಭೆ ಹಾಗೂ ವಿವಿಧ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮೇಲಿನ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.
ನವದೆಹಲಿ: ಭಾರತೀಯ ದಂಡ ಸಂಹಿತೆ (Indian Penal Code), ದಂಡ ಪ್ರಕ್ರಿಯಾ ಸಂಹಿತೆ (CrPc) ಭಾರತ ಸಾಕ್ಷ್ಯ ಅಧಿನಿಯಮ (Evidence Act)ಗೆ ಬದಲಾಗಿ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿದೆ.
ನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಮಣಿಪುರ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಹಾಸ್ಯ ಚಟಾಕಿ ಹಾರಿಸುತ್ತಿದ್ದರು. ಇದು ಪ್ರಧಾನಿ ಹುದ್ದೆಗೆ ಭೂಷಣವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಅಹಮದಾಬಾದ್: ಗುಜರಾತ್‌ನ ಬವ್ಲಾ –ಬಗೋದರ ಹೆದ್ದಾರಿಯಲ್ಲಿ ಎರಡು ಟ್ರಕ್‌ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನವದೆಹಲಿ: ಖಾಲಿಸ್ತಾನ ಪರ ತೀವ್ರಗಾಮಿಗಳನ್ನು ಮಟ್ಟ ಹಾಕಲು 95,000 ಪೌಂಡ್ (ಸುಮಾರು ₹1 ಕೋಟಿ) ಮೀಸಲಿಡಲಾಗಿದೆ ಎಂದು ಬ್ರಿಟನ್ ಭದ್ರತಾ ಸಚಿವ ಟಾಮ್ ಟುಗೆಂಧಟ್ ಘೋಷಿಸಿದ್ದಾರೆ.
ಬೀಜಿಂಗ್: ಚೀನಾದ ಹೆಬೈ ಪ್ರಾಂತ್ಯದಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು, ಪ್ರವಾಹದಿಂದಾಗಿ 29 ಮಂದಿ ಮೃತಪಟ್ಟು, 16 ಮಂದಿ ನಾಪತ್ತೆಯಾಗಿದ್ದಾರೆ. ಜತೆಗೆ, ಪ್ರವಾಹ ಪೀಡಿತ ಪ್ರದೇಶದಲ್ಲಿ ಭಾರಿ ನಷ್ಟ ಉಂಟಾಗಿದೆ ಎಂದು ‘ಗ್ಲೋಬಲ್ ಟೈಮ್ಸ್’ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.