ನವದೆಹಲಿ: ‘ಇಂಡಿಯಾ’ ಮೈತ್ರಿಕೂಟವು ದೇಶದ ಬಡವರಿಗಾಗಿ, ಸೌಲಭ್ಯ ವಂಚಿತರು ಹಾಗೂ ಬುಡಕಟ್ಟು ಜನರಿಗಾಗಿ ಹೋರಾಟ ನಡೆಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ವೇಳೆ ದೇಶದ ಜನರ ಹಕ್ಕುಗಳಿಗಾಗಿ ಅವರ ಸಂಕಷ್ಟಗಳಿಗೆ ‘ಇಂಡಿಯಾ’ ಮೈತ್ರಿಕೂಟ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೊರೇನ್ ಅವರಿಗೆ ಶುಭ ಕೋರಿದ್ದಾರೆ. ದೇಶದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ಆರ್ಥಿಕ ಸಬಲೀಕರಣವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ’ಇಂಡಿಯಾ’ ಮೈತ್ರಿಕೂಟ ಒಗ್ಗಟಿನ ಮಂತ್ರ ಜಪಿಸುವ ಮೂಲಕ ಹೋರಾಟ ನಡೆಸಲಿದೆ ಎಂದು ‘ಎಕ್ಸ್‘ನಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ( ಜೆಎಂಎಂ) ಮತ್ತು ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುತ್ತಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿಯೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ಸಮ್ಮಿಶ್ರ ಸರ್ಕಾರ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಯಲಿದೆ. ಬಿಜೆಪಿ ವಿರೋಧ ಪಕ್ಷವಾಗಿ ಮುಂದುವರಿಯಲಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ಜಾರ್ಖಂಡ್ ವಿಧಾನಸಭೆ ಚುನಾವಣೆ ಈ ವರ್ಷದ ಕೊನೆಯಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.