ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಸಾಂವಿಧಾನಿಕ ಸಿಂಧುತ್ವ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಲಿದೆ.
ಈ ಹಿನ್ನೆಲೆಯಲ್ಲಿ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.
ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನವೇ, ಪೊಲೀಸರು ಮೆಹಬೂಬಾ ಮುಫ್ತಿ ಅವರ ನಿವಾಸದ ಬಾಗಿಲುಗಳನ್ನು ಮುಚ್ಚಿ, ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ಪಕ್ಷವು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಈ ನಡುವೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ಗುಪ್ಕಾರ್‌ನಲ್ಲಿರುವ ನಿವಾಸದ ಬಳಿ ಪತ್ರಕರ್ತರಿಗೆ ಬರಲು ಪೊಲೀಸರು ಅವಕಾಶ ನೀಡಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಮರ್ ಅಬ್ದುಲ್ಲಾ ಅವರು 2020 ರಲ್ಲಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ ನಂತರ ತಂದೆ ಫಾರೂಕ್ ಅವರೊಂದಿಗೆ ವಾಸಿಸುತ್ತಿದ್ದಾರೆ.
ಸದ್ಯ ಫಾರೂಕ್ ಅಬ್ದುಲ್ಲಾ ಶ್ರೀನಗರದ ಸಂಸತ್ ಸದಸ್ಯರಾಗಿದ್ದಾರೆ. ಹೀಗಾಗಿ ಚಳಿಗಾಲದ ಅಧವೇಶನಕ್ಕಾಗಿ ದೆಹಲಿಗೆ ತೆರಳಿದ್ದಾರೆ. ಮಗ ಮಾತ್ರ ನಿವಾಸದಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.