ADVERTISEMENT

LGಗೆ ಹೆಚ್ಚು ಅಧಿಕಾರ: ಕೇಂದ್ರದ ವಿರುದ್ಧ ಜಮ್ಮು ಯುವ ಕಾಂಗ್ರೆಸ್ ಪ್ರತಿಭಟನೆ

ಪಿಟಿಐ
Published 20 ಜುಲೈ 2024, 10:29 IST
Last Updated 20 ಜುಲೈ 2024, 10:29 IST
   

ಜಮ್ಮು: ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ನೀಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿತು.

ಯುವ ಕಾಂಗ್ರೆಸ್ ಉಸ್ತುವಾರಿ ಮಾನ್ ಸಿಂಗ್ ರಾಥೋಡ್ ನೇತೃತ್ವದಲ್ಲಿ ನಗರದ ಹೃದಯಭಾಗದಲ್ಲಿರುವ ಮಹಾರಾಜ ಹರಿಸಿಂಗ್ ಪಾರ್ಕ್‌ನಲ್ಲಿ ಜಮಾಯಿಸಿದ ಯುವ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ರಾಥೋಡ್, 'ಜಮ್ಮು ಮತ್ತು ಕಾಶ್ಮೀರದ ಜನರಿಗಾಗಿ ನಾವು ಈ ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಸೆಪ್ಟೆಂಬರ್‌ 30ರೊಳಗೆ ಚುನಾವಣೆ ನಡೆಸಬೇಕಿದೆ. ಆದರೆ ನಿಗದಿಪಡಿಸಿದ ಗಡುವಿಗೆ ಮುಂಚೆಯೇ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡಿ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರವನ್ನು ದೆಹಲಿಯನ್ನಾಗಿ ಮಾಡಲು ಸರ್ಕಾರ ಬಯಸುತ್ತಿದೆ. ಅಲ್ಲಿ ಮುಖ್ಯಮಂತ್ರಿ ಬದಲಿಗೆ ಲೆಫ್ಟಿನೆಂಟ್ ಗವರ್ನರ್ ಅವರೇ ಸರ್ಕಾರ ನಡೆಸುತ್ತಿದ್ದಾರೆ' ಎಂದು ಹೇಳಿದರು.

ADVERTISEMENT

ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಇಲ್ಲಿ ಎಲ್ಲವೂ ಸರಿಯಿದೆ ಎಂಬ ಬಿಜೆಪಿ ಹೇಳಿಕೆಗಿಂತ ಇಲ್ಲಿನ ಪರಿಸ್ಥಿತಿ ಭಿನ್ನವಾಗಿದೆ‌. ಪದೇ ಪದೇ ನಡೆಯುತ್ತಿರುವ ದಾಳಿಗಳು ಸರ್ಕಾರದ ಸಂಪೂರ್ಣ ವೈಫಲ್ಯವನ್ನು ತೋರಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಾಗ ಸಂಭವಿಸುತ್ತಿರುವ ಸಾವುನೋವುಗಳ ಬಗ್ಗೆ ಸರ್ಕಾರ ಉತ್ತರಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.