ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಇಂದು (ಭಾನುವಾರ) ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸಿದ್ದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
‘ಇಂದು ನಾನು ದೆಹಲಿ ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವ ಮೂಲಕ ಸಂತಸಗೊಂಡಿದ್ದೇನೆ. ನನ್ನ ಸಹೋದರರು ಹಾಗೂ ಸಹೋದರಿಯರಿಗೆ ಈ ಸೌಲಭ್ಯವು ಹೇಗೆ ಸಹಾಯವಾಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಜತೆಗೆ, ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮ ಸೇವೆ ಒದಗಿಸುತ್ತಿರುವ ಅಧಿಕಾರಿಗಳಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ’ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ಗೆ ತಿಳಿಸಿದ್ದಾರೆ.
‘1996ರ ಜೂನ್ 1ರಿಂದ 1997ರ ಮಾರ್ಚ್ 24ರ ವರೆಗೆ ನಾನು ದೇಶದ ಪ್ರಧಾನಿಯಾಗಿದ್ದೆ. ಆಗಿನ ದೆಹಲಿ ಲೆಫ್ಟಿನೆಂಟ್ ಗವರ್ನರ್, ದೆಹಲಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸರ್ಕಾರದ ನೆರವಿನಿಂದ ದೆಹಲಿ ಮೆಟ್ರೊ ಯೋಜನೆಗೆ ಚಾಲನೆ ನೀಡಲಾಯಿತು. ಈಗ ಪ್ರತಿನಿತ್ಯ 65 ಲಕ್ಷ ಜನರು ಮೆಟ್ರೊದಲ್ಲಿ ಸಂಚರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೆರವಿನಿಂದ ದೆಹಲಿ ಮೆಟ್ರೊ ಮಾರ್ಗವು ಮತ್ತಷ್ಟು ವಿಸ್ತರಣೆಯಾಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇವೇಗೌಡರು ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.