ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಇಂದು (ಭಾನುವಾರ) ನಡೆದ ಸರ್ವಪಕ್ಷಗಳ ಸಭೆಯಲ್ಲಿ ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ನಾಯಕರು ಕ್ರಮವಾಗಿ ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದಾರೆ.
ರಾಜ್ಯಗಳ ವಿಶೇಷ ಸ್ಥಾನಮಾನ ಬೇಡಿಕೆ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ, ಜೆಡಿಯು ನಾಯಕರು ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದರು. ಆದೇ ರೀತಿ ವೈಎಸ್‌ಆರ್‌ಸಿಪಿ ನಾಯಕರು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ಒತ್ತಾಯಿಸಿದರು. ವಿಚಿತ್ರವೆಂದರೆ, ಟಿಡಿಪಿ ನಾಯಕರು ಈ ವಿಷಯದ ಬಗ್ಗೆ ಮೌನವಾಗಿದ್ದರು’ ಎಂದು ವ್ಯಂಗ್ಯವಾಡಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಲ್ಲಿ ತಾನು ವಹಿಸಿರುವ ಪ್ರಮುಖ ಪಾತ್ರದ ಬಗ್ಗೆ ಉಲ್ಲೇಖಿಸಿರುವ ಜೆಡಿಯು, ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಅಥವಾ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಬಗ್ಗೆ ಈಚೆಗೆ ನಿರ್ಣಯ ಕೈಗೊಂಡಿತ್ತು.
ಇತ್ತ ಆಂಧ್ರಪ್ರದೇಶಕ್ಕೂ ವಿಶೇಷ ಸ್ಥಾನಮಾನ ನೀಡುವಂತೆ ಎನ್‌ಡಿಎ ಮಿತ್ರಪಕ್ಷವಾದ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕರು ಆಗ್ರಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.