ರಾಂಚಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಭಾನುವಾರ) ಜಾರ್ಖಂಡ್‌ನಲ್ಲಿ ಭಾರತೀಯ ಜನತಾ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಜತೆಗೆ, ಮೂರು ಸಾರ್ವಜನಿಕ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅಮಿತ್ ಶಾ ಅವರು ಶನಿವಾರ ರಾತ್ರಿಯೇ ಜಾರ್ಖಂಡ್ ರಾಜಧಾನಿ ರಾಂಚಿಗೆ ಆಗಮಿಸಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ .
‘ಅಮಿತ್ ಶಾ ಅವರು ರಾಂಚಿಯಲ್ಲಿ ಜಾರ್ಖಂಡ್ ವಿಧಾನಸಭಾ ಚುನಾವಣೆಗಾಗಿ ‘ಸಂಕಲ್ಪ ಪತ್ರ’ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಘಟಶಿಲಾ, ಬರ್ಕಥಾ ಮತ್ತು ಸಿಮಾರಿಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಸಾರ್ವಜನಿಕ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದು ಬಿಜೆಪಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಸೋಮವಾರ) ಜಾರ್ಖಂಡ್‌ಗೆ ಭೇಟಿ ನೀಡಲಿದ್ದು, ಎರಡು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ನ.5 ರಂದು ಜೆಮ್ಶೆಡ್‌ಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಪ್ರಣಾಳಿಕೆಯು ಬುಡಕಟ್ಟು ಜನಾಂಗದ ನಾಯಕ ಬಿರ್ಸಾ ಮುಂಡಾ ಅವರ ಕೊಡುಗೆ, 25 ವರ್ಷಗಳ ಜಾರ್ಖಂಡ್ ರಚನೆ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ 150 ಅಂಶಗಳನ್ನು ಒಳಗೊಂಡಿರಲಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ‘ಗೋಗೋ ದೀದಿ’ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ₹2,100 ಆರ್ಥಿಕ ನೆರವು, ಯುವಕರಿಗೆ 5 ಲಕ್ಷ ಉದ್ಯೋಗ, ಅರ್ಹರಿಗೆ ವಸತಿ ಸೌಲಭ್ಯ, ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹500ಕ್ಕೆ ಇಳಿಕೆ ಮಾಡಲಾಗುವುದು ಹಾಗೂ ಒಂದು ವರ್ಷದಲ್ಲಿ ಎರಡು ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು. ಅಲ್ಲದೇ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಎರಡು ವರ್ಷಗಳವರೆಗೆ ಮಾಸಿಕ ₹2000 ನೆರವು ನೀಡಲಾಗುವುದು ಎಂಬ 5 ಅಂಶಗಳನ್ನು ಬಿಜೆಪಿ ಜನರ ಮುಂದಿಟ್ಟಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹಾಗೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ‘ಪಂಚ ಪ್ರಾಣ’ (ಐದು ಪ್ರತಿಜ್ಞೆ) ಮೂಲಕ ಪ್ರಣಾಳಿಕೆಯ ಐದು ಅಂಶಗಳನ್ನು ಈಚೆಗೆ ಘೋಷಿಸಿದ್ದರು.
81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.