ರಾಂಚಿ: ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತೆ ಮೂರು ತಿಂಗಳು ಜಾಮೀನು ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಇದೇಆಗಸ್ಟ್ 30ಕ್ಕೆ ಸಿಬಿಐ ನ್ಯಾಯಾಲಯಕ್ಕೆಶರಣಾಗುವಂತೆ ಜಾರ್ಖಂಡ್ ನ್ಯಾಯಾಲಯ ಸೂಚಿಸಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಲಾಲ್ ಪ್ರಸಾದ್ ಯಾದವ್ ಮುಂಬೈನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಾಗಿದ್ದು ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳುವ ಮೂಲಕ ನ್ಯಾಯಧೀಶ ಅಪರೇಶ್ ಕುಮಾರ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಮುಂಬೈನ ಆಸೀಯನ್ ಹಾರ್ಟ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್ ಯಾದವ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂತ್ರಪಿಂಡ ಮತ್ತು ಕಣ್ಣಿನಪೊರೆಗೆ ಸಂಬಂಧಿಸಿದಂತೆ ಮತ್ತೆ ಮೂರು ಶಸ್ತ್ರಚಿಕಿತ್ಸೆ ನಡೆಸಬೇಕು ಎಂದು ವೈದ್ಯರು ತಿಳಿಸಿರುವುದರಿಂದ ಮತ್ತೆ ಮೂರು ತಿಂಗಳು ಜಾಮೀನು ವಿಸ್ತರಿಸುವಂತೆ ನ್ಯಾಯಾಲಯಕ್ಕೆಲಾಲು ಪ್ರಸಾದ್ ಅವರ ವಕೀಲ ಪ್ರಬಾತ್ ಕುಮಾರ್ ಮನವಿ ಮಾಡಿದರು. ಈ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ.
ನ್ಯಾಯಾಲಯ ಶರಣಾಗುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಲಾಲು ಪ್ರಸಾದ್ ಅವರಿಗೆ ರಾಂಚಿಯ ರಾಜೇಂದ್ರ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಮುಂದುವರಿಸಲಾಗುವುದು ಎಂದು ಪ್ರಬಾತ್ ಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.