ಅಲಿಗಡ, ಬುಲಂದ್‌ಶಹರ್: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಅವರ ಅಂತ್ಯಕ್ರಿಯೆಯು ಸರ್ಕಾರಿ ಗೌರವಗಳೊಂದಿಗೆ ಬುಲಂದ್‌ಶಹರ್‌ನ ನರೋರಾ ಪಟ್ಟಣದ ಬನ್ಸಿ ಘಾಟ್‌ನಲ್ಲಿ ಸೋಮವಾರ ನೆರವೇರಿತು.
ಕಲ್ಯಾಣ್ ಸಿಂಗ್ ಅವರ ಪುತ್ರ ರಾಜವೀರ್ ಸಿಂಗ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅಲಿಗಡದಿಂದ ಬುಲಂದ್ ಶಹರ್‌ಗೆ ತರಲಾಯಿತು. ನರೋರಾ ಪಟ್ಟಣದ ಬನ್ಸಿ ಘಾಟ್‌ಗೂ ಒಯ್ಯುವ ಮುನ್ನ ಪಾರ್ಥಿವ ಶರೀರವನ್ನು ಕೆಲಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಕೇಂದ್ರ ಗೃಹಸಚಿವ ಅಮಿತ್ ಶಾ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಸೇರಿದಂತೆ ಇನ್ನಿತರ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, ಬಿಜೆಪಿ ನಾಯಕಿ ಉಮಾ ಭಾರತಿ ಸೇರಿದಂತೆ ಹಲವರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಪಕ್ಷದ ನಾಯಕರು, ಕಾರ್ಯಕರ್ತರು ಸೇರಿದಂತೆ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.