ಚೆನ್ನೈ:ಚಿತ್ರನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್‌ಹಾಸನ್ ಅವರು ಕಾಲಿನ ಶಸ್ತ್ರಚಿಕಿತ್ಸೆಗಾಗಿ ಚುನಾವಣಾ ಪ್ರಚಾರದಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕಮಲ್ ಹಾಸನ್, ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಮತ್ತೆ ಕಾಲಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ವೈದ್ಯರ ಸಲಹೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು,‘ ಶಸ್ತ್ರಚಿಕಿತ್ಸೆ ಮತ್ತು ವಿಶ್ರಾಂತಿಯ ಬಳಿಕ ಹೊಸ ಚೈತನ್ಯದೊಂದಿಗೆ ಚುನಾವಣಾ ಪ್ರಚಾರ ಮುಂದುವರಿಸುವುದಾಗಿ’ ಭರವಸೆ ನೀಡಿದ್ದಾರೆ.
‘ನಮ್ಮ ಜನರನ್ನು ಭೇಟಿಯಾಗಲು ನಾನು ರಾಜ್ಯದಾದ್ಯಂತ15 ದಿನಗಳಲ್ಲಿ 5000 ಕಿ.ಮೀ ಪ್ರಯಾಣಿಸಿದ್ದೇನೆ. ಈ ವೇಳೆ ಜನರು ಬದಲಾವಣೆಗಾಗಿ ಕಾಯುತ್ತಿದ್ದಾರೆ ಎಂಬುದು ತಿಳಿಯಿತು. ಜನರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಬೇಕೆಂಬ ಉತ್ಸಾಹವು ನನ್ನ ವೈಯಕ್ತಿಕ ಸುರಕ್ಷತೆಯನ್ನು ಕಡೆಗಣಿಸುವಂತೆ ಮಾಡಿತು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
‘ಕಾಲಿನ ಶಸ್ತ್ರಚಿಕಿತ್ಸೆಯಿಂದಾಗಿ ನನಗೆ ಜನರನ್ನು ನೇರವಾಗಿ ಭೇಟಿಯಾಗಲು ಸಾಧ್ಯವಿಲ್ಲ. ಆದರೆ, ನಾನು ತಂತ್ರಜ್ಞಾನದ ಸಹಾಯದಿಂದ ಸದಾ ನಿಮ್ಮೊಂದಿಗೆ ಸಂಪರ್ಕದಲ್ಲಿ ಇರುತ್ತೇನೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.