ADVERTISEMENT

PUC ಪರೀಕ್ಷೆಯಲ್ಲಿ ಹಿಜಾಬ್‌ಗೆ ಅವಕಾಶ: ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಮಾರ್ಚ್‌ 9ರಿಂದ ನಡೆಯುವ ಪಿಯು ಪರೀಕ್ಷೆ ವೇಳೆ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಕೋರಿದ್ದ ಅರ್ಜಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಫೆಬ್ರುವರಿ 2023, 8:21 IST
Last Updated 22 ಫೆಬ್ರುವರಿ 2023, 8:21 IST
   

ನವದೆಹಲಿ: ಮುಂಬರುವ ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ವಿದ್ಯಾರ್ಥಿನಿಯರ ಗುಂಪೊಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಬುಧವಾರ ಒಪ್ಪಿದೆ.

ಅರ್ಜಿಯ ವಿಚಾರಣೆ ನಡೆಸಲು ಒಪ್ಪಿದ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಹಾಗೂ ಪಿ.ಎಸ್‌ ನರಸಿಂಹ ಅವರಿದ್ದ ಪೀಠ, ಅರ್ಜಿಯನ್ನು ಪಟ್ಟಿ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದೆ.

ಮಾರ್ಚ್‌ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿನಿಯರ ಪರ ವಕೀಲ ಶಾದನ್‌ ಫರಾಸತ್‌ ಅವರು ಪೀಠಕ್ಕೆ ಮನವಿ ಮಾಡಿದರು.

ADVERTISEMENT

ಈಗಾಗಲೇ ಹಿಜಾಬ್‌ ವಿವಾದದಿಂದಾಗಿ ವಿದ್ಯಾರ್ಥಿನಿಯರ ಒಂದು ವರ್ಷ ನಷ್ಟವಾಗಿದೆ. ಮತ್ತೊಂದು ವರ್ಷ ನಷ್ಟ ಆಗದೇ ಇರಲು, ಅವರಿಗೆ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಈ ಎಲ್ಲಾ ವಿದ್ಯಾರ್ಥಿಗಳು ಈಗ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಪರೀಕ್ಷೆ ಬರೆಯಲು ಸರ್ಕಾರಿ ಕಾಲೇಜಿಗೆ ತೆರಳಬೇಕು. ಹೀಗಾಗಿ ಅಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪಿಯು ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ಸಂಬಂಧ, 2022ರ ಅಕ್ಟೋಬರ್‌ 13 ರಂದು ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು. ಅಲ್ಲದೇ ತ್ರಿದಸ್ಯ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.