ನವದೆಹಲಿ: ಕರ್ನಾಟಕದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆ ಚುಕ್ಕಿ ರೋಗ ಹಾಗೂ ಹಳದಿ ಎಲೆ ರೋಗ ನಿಯಂತ್ರಣ ಮತ್ತು ಸಂಶೋಧನೆಗೆ ₹197 ಕೋಟಿ ನೆರವು ನೀಡುವಂತೆ ಕೇಂದ್ರ ಕೃಷಿ ಸಚಿವಾಲಯಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ.
ಕರ್ನಾಟಕದಲ್ಲಿ ಎಲೆಚುಕ್ಕಿ ರೋಗದಿಂದಾಗಿ 20 ಸಾವಿರ ಹೆಕ್ಟೇರ್‌ನಷ್ಟು ಅಡಿಕೆ ತೋಟಕ್ಕೆ ಹಾನಿಯಾಗಿದೆ. ಈ ರೋಗದ ಬಗ್ಗೆ ಅಧ್ಯಯನಕ್ಕೆ ವಿಜ್ಞಾನಿಗಳ ತಂಡ ಕಳುಹಿಸಿಕೊಡಬೇಕು ಎಂದು ಕರ್ನಾಟಕದ ಅಡಿಕೆ ಬೆಳೆಗಾರರ ನಿಯೋಗವು ಕೇಂದ್ರ ಕೃಷಿ ಸಚಿವರಿಗೆ ಕಳೆದ ಅಕ್ಟೋಬರ್‌ನಲ್ಲಿ ಮನವಿ ಸಲ್ಲಿಸಿತ್ತು.
‘ಎಲೆಚುಕ್ಕಿ ರೋಗವು ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯ ಎದುರಾಗಿದೆ. ಅಡಿಕೆ ಬೆಳೆಯನ್ನು ಉಳಿಸಿ, ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದೆ. ಜತೆಗೆ, ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಆರ್ಥಿಕ ನೆರವು ನೀಡಬೇಕು’ ಎಂದು ಮನವಿ ಮಾಡಿತ್ತು.
‘ದೇಶದಲ್ಲಿ 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು, ವಾರ್ಷಿಕ ವಹಿವಾಟು ₹5,400 ಕೋಟಿ ಆಗಿದೆ. ಕರ್ನಾಟಕದಲ್ಲಿ ₹4,300 ಕೋಟಿ ಮೌಲ್ಯದ 9.5 ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಅಡಿಕೆ ಬೆಳೆಯು 50 ಲಕ್ಷ ಜನರಿಗೆ ಜೀವನೋಪಾಯವನ್ನು ಒದಗಿಸುತ್ತಿದೆ. ಕಳೆದ ಕೆಲವು ವರ್ಷಗಳಿಂದ ಅಡಿಕೆಗೆ ಉತ್ತಮ ಬೆಲೆ ದೊರಕುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡಿರುವ ಈ ರೋಗದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ನಿಯೋಗ ಗಮನ ಸೆಳೆದಿತ್ತು.
ಈ ರೋಗದ ಬಗ್ಗೆ ಅಧ್ಯಯನ ನಡೆಸಲು ಏಳು ತಜ್ಞರನ್ನು ಒಳಗೊಂಡ ಸಮಿತಿಯನ್ನು ಕೇಂದ್ರ ಕೃಷಿ ಸಚಿವಾಲಯವು ಅಕ್ಟೋಬರ್‌ನಲ್ಲಿ ರಚಿಸಿತ್ತು. ಈ ತಜ್ಞರ ತಂಡವು ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿತ್ತು. ತಜ್ಞರ ತಂಡದ ಶಿಫಾರಸಿನಂತೆ ಕರ್ನಾಟಕ ಸರ್ಕಾರವು ಕೊಚ್ಚಿ ಸಿಪಿಸಿಆರ್‌ಐ ಮೂಲಕ ಕೃಷಿ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.