ನವದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ಸಾವಿರಾರು ರೈತರು ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ, 'ಕಿಸಾನ್ ಮಹಾಪಂಚಾಯತ್' ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಳ್ಳಲಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ದರ್ಶನ್ ಪಾಲ್, ‘ಕೇಂದ್ರವು ಡಿಸೆಂಬರ್ 9, 2021 ರಂದು ಲಿಖಿತವಾಗಿ ನಮಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು. ನಿರಂತರವಾಗಿ ರೈತರು ಎದುರಿಸುತ್ತಿರುವ ಬಿಕ್ಕಟ್ಟನ್ನು ಕಡಿಮೆ ಮಾಡಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಲಕ್ಷಾಂತರ ರೈತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬರುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.
ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕುರಿತು ಕಾನೂನು ಖಾತರಿಗಾಗಿ ಒತ್ತಾಯಿಸಲು ‘ಕಿಸಾನ್ ಮಹಾಪಂಚಾಯತ್’ ನಡೆಸಲಾಗುತ್ತಿದೆ ಎಂದು ರೈತ ಸಂಘಗಳ ಒಕ್ಕೂಟದ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
ರಾಮಲೀಲಾ ಮೈದಾನದ ಸುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯತ್ಯಯಾಗಲಿದ್ದು, ವಿಶೇಷವಾಗಿ ದೆಹಲಿ ಗೇಟ್‌ನಿಂದ ಅಜ್ಮೇರಿ ಗೇಟ್ ಚೌಕ್‌ವರೆಗಿನ ಜೆಎಲ್‌ಎನ್ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಈಗ ರದ್ದುಗೊಳಿಸಿರುವ ಕೃಷಿ ಕಾನೂನುಗಳ ವಿರುದ್ಧ ಒಂದು ವರ್ಷದ ಪ್ರತಿಭಟನೆ ನಡೆಸಿತ್ತು. ಈ ಸಮಯದಲ್ಲಿ ರೈತರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವುದು. ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ರೈತರ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ನಂತರ ಚಳವಳಿಯನ್ನು ಸ್ಥಗಿತಗೊಳಿಸಿತು.
ಕಾರ್ಯಕ್ರಮದಲ್ಲಿ ಯಾವುದೇ ಅವಘಡ ಸಂಭವಿಸದಂತೆ ಅಗತ್ಯ ಕ್ರಮಕೈಗೊಳ್ಳಲು 2,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.