ನವದೆಹಲಿ: ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತ್ವರಿತವಾಗಿ ಕ್ರಮ ಜರುಗಿಸುವಂತೆ ಹಾಗೂ ಆಕೆಯ ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮಾಜಿ ಕ್ರಿಕೆಟಿಗ ಮತ್ತು ಎಎಪಿ ರಾಜ್ಯಸಭಾ ಸದಸ್ಯ ಹರಭಜನ್ ಸಿಂಗ್ ಪತ್ರ ಬರೆದಿದ್ದಾರೆ.
ತ್ವರಿತ ನ್ಯಾಯ ಒದಗಿಸುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸಿಂಗ್ ಪತ್ರ ಬರೆದಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಹರಭಜನ್ ಸಿಂಗ್,‘ ನಮ್ಮೆಲ್ಲರ ಮನಸ್ಸಿನ ಮೇಲೆ ಪರಿಣಾಮ ಬೀರಿದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ವಿಳಂಬವಾಗುತ್ತಿರುವುದು ದುರದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ’ ಎಂದು ಹೇಳಿದ್ದಾರೆ.
‘ಸಂತ್ರಸ್ತೆಯ ಸಾವಿಗೆ ನ್ಯಾಯ ಒದಗಿಸುವಂತೆ ಕೋರುತ್ತೇನೆ. ಹೆಣ್ಣು ಮಕ್ಕಳು ಮತ್ತು ಮಹಿಳೆರಿಗೆ ಸುರಕ್ಷಿತ ಸಮಾಜ ನಿರ್ಮಾಣವಾಗಬೇಕು. ಆ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಬಯಸುತ್ತೇನೆ. ಆಕೆಗೆ ನ್ಯಾಯ ದೊರಕಿಸುವ ಹೋರಾಟದಲ್ಲಿ ವೈದ್ಯರೊಂದಿಗೆ ನಾನು ನಿಲ್ಲುತ್ತೇನೆ’ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಆ.9ರಂದು ಕೋಲ್ಕತ್ತದ ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.